ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದ ಹೈಕೋರ್ಟ್ – ತನಿಖೆಗೆ ಆದೇಶ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್‌ಗಳ ಅಕ್ರಮ ವರ್ಗಾವಣೆ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರು ಆದೇಶ ನೀಡಿದ್ದರು. ಈ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸಿಎಂ ಅರ್ಜಿಯನ್ನು ವಜಾಗೊಳಿಸಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದು ತನಿಖೆಗೆ ಆದೇಶಿಸಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) 14 ಸೈಟುಗಳನ್ನು ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಖಾಸಗಿ ವ್ಯಕ್ತಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಆದರೆ, ಪ್ರಾಸಿಕ್ಯೂಷನ್ ಎದುರಿಸದೇ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ಮೇಲ್ಮನವಿ ಹೋಗಿದ್ದರು. ಈ ಅರ್ಜಿ ವಿಚಾರಣೆ ಮಾಡಿದ್ದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಸಪ್ಟಂಬರ್ 24ರಂದು ಆದೇಶ ನೀಡುವುದಾಗಿ ತಿಳಿಸಿದ್ದರು.
ಸಿಎಂ ಸಿದ್ದರಾಮಯ್ಯ ಅವರು ಪ್ರಾಸಿಕ್ಯೂಷನ್‌ಗೆ ಹಾಜರಾಗುವಂತೆ ರಾಜ್ಯಪಾಲರು ನೋಟೀಸ್ ನೀಡದ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮುಡಾ ಹಗರಣದ ಅರ್ಜಿ ವಿಚಾರಣೆಯನ್ನೂ ಕೈಗೆತ್ತಿಕೊಂಡಿತ್ತು. ಆದರೆ, ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಪಿಟಿಷನ್ ಅರ್ಜಿಯ ಆದೇಶ ಹೊರಬೀಳುವವರೆಗೂ ಕೆಳಹಂತದ ಯಾವುದೇ ನ್ಯಾಯಾಲಯಗಳು (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಯಾವುದೇ ತೀರ್ಪು ಅಥವಾ ಆದೇಶ ನೀಡದಂತೆ ಹೈಕೋರ್ಟ್‌ನಿಂದ ತಡೆ ಒಡ್ಡಲಾಗಿತ್ತು. ಇದೀಗ ಆದೇಶ ಹೊರ ಬಿದ್ದ ಬೆನ್ನಲ್ಲಿಯೇ ಕೆಳ ಹಂತದ ಕೋರ್ಟ್‌ಗಳಲ್ಲಿ ಪ್ರಾಸಿಕ್ಯೂಷನ್ ವಿಚಾರಣೆ ನಡೆಯಲಿದೆ. ಇದೀಗ ಸಿಎಂ ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದ ಅರ್ಜಿ ವಜಾಗೊಳಿಸಿದ ಬೆನ್ನಲ್ಲಿಯೇ ಮುಡಾ ಹಗರಣದ ತನಿಖೆ ಮುಮದುವರೆಯಲಿದೆ.
ರಾಜಭವನಕ್ಕೆ ಹೆಚ್ಚುವರಿ ಭದ್ರತೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ಎದರಿಸಲು ನೋಟೀಸ್ ನೀಡಿದ್ದ ಬಗ್ಗೆ ರಾಜ್ಯಪಾಲರ ಭವನಕ್ಕೆ ಸರ್ಕಾರದಿಂದ ಹೆಚ್ಚುವರಿ ಭದ್ರತೆ ನೀಡಲಾಗಿದೆ. ಈ ಹಿಂದೆ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ದೊಡ್ಡ ಪ್ರತಿಭಟನೆ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ನೋಟೀಸ್ ವಜಾ ಮಾಡುವಂತೆ ಸಲ್ಲಿಕೆ ಮಾಡಿದ್ದ ಅರ್ಜಿಯನ್ನೂ ಹೈಕೋರ್ಟ್ ವಜಾ ಮಾಡಿದ್ದರಿಂದ ಸಿಎಂ ಕುರ್ಚಿಗೆ ಕಂಟಕ ಎದುರಾಗಲಿದೆ. ಆದ್ದರಿಂದ ಕಾಂಗ್ರೆಸ್ ಕಾರ್ಯಕರ್ತರಿಂದ ರಾಜಭವನದ ಸುತ್ತಲೂ ಪ್ರತಿಭಟನೆ ಆಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಜಭವನಕ್ಕೆ ಹೆಚ್ಚಿನ ಬಂದೋಬಸ್ತ್ ಒದಗಿಸಲಾಗಿದೆ. ರಾಜ್ಯ ಪೊಲೀಸ್ ಇಲಾಖೆಯಿಂದ ರಾಜಭವನಕ್ಕೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಹೋಗಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ವಜಾಗೊಳಿಸಿದ ಬೆನ್ನಲ್ಲಿಯೇ ಇದೀಗ ಅವರ ಕುರ್ಚಿಗೆ ಕಂಟಕ ಎದುರಾಗಲಿದೆ ಎಂಬ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರು ಹಾಗೂ ವಕೀಲರೊಂದಿಗೆ ಚರ್ಚೆ ಮಾಡಿದ್ದಾರೆ. ಇದೀಗ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲು ಸಿಎಂ ನಿರ್ಧಾರ ಮಾಡಿದ್ದಾರೆ. ತೀರ್ಪಿನ ವಿವರ ಬಂದ ಬಳಿಕ ಕಾನೂನು ಹೋರಾಟದ ಬಗ್ಗೆ ತಿರ್ಮಾನ ಮಾಡಿದ್ದಾರೆ. ಇದೀಗ ಹಿರಿಯ ವಕೀಲರ ಜೊತೆಗೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.