ಮಾರ್ಚ್ 21 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿ ನಿಷೇಧಾಜ್ಞೆ
ಮಂಗಳೂರು :- ಎಸ್.ಎಸ್.ಎಲ್.ಸಿ ಪರೀಕ್ಷೆ-1 ಮಾರ್ಚ್ 21 ರಿಂದ ಎಪ್ರಿಲ್ 4ರ ತನಕ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಆದೇಶಿಸಿದ್ದಾರೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು ಅಥವಾ ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು / ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪರೀಕ್ಷಾ ದಿನದಂದು ಪರೀಕ್ಷೆ ಮುಕ್ತಾಯವಾಗುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಮತ್ತು ಸಮೀಪದಲ್ಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ / ಸೈಬರ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ. ಬ್ಯಾಂಕ್ ಭದ್ರತಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಣೆ ವೇಳೆ ಲಾಠಿ/ಶಸ್ತ್ರಾಸ್ತ್ರ ಉಪಯೋಗಿಸುವುದಕ್ಕೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಡಂಡಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.