ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿ
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಹೀಂ ಎಂಬತನ ಕೊಲೆ ನಡೆದಿದ್ದು, ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಆದುದರಿಂದ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನದ್ಯಂತ ಭಾರತೀಯ ನಾಗರಿಕ ಸುರಕ್ಷಾ ಸಾಹಿತೆ 2023ರ ಕಲಂ 163ರಡಿ ಮೇ 27ರಿಂದ ಸಾಯಂಕಾಲ 6ರಿಂದ ಮೇ 30ರ ಸಾಯಂಕಾಲ 6:00 ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಆನಂದ ಕೆ. ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಜಿಲ್ಲೆಯ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಮುಂಜಾಗ್ರತಾ ಕ್ರಮವಾಗಿ ಅತೀ ಅವಶ್ಯವಾಗಿರುವ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇಲೆ ತಿಳಿಸಿದ ದಿನಗಳಲ್ಲಿ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರು ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆಂದು ಪ್ರಕಟಿಸಿದ್ದಾರೆ.




