November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುಟಾಣಿ ಮಗುವಿನೊಂದಿಗೆ ಸಮುದ್ರಕ್ಕೆ ಹಾರಿ ಸಾಯಲು ಹೋಗಿದ್ದ ಯುವಕ

ವಿಡಿಯೋ ಬೆನ್ನತ್ತಿ ಜೀವ ಉಳಿಸಿದ ಪಣಂಬೂರು ಪೊಲೀಸರಿಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ

ಪತ್ನಿ ಜೊತೆ ಮನಸ್ತಾಪ ಉಂಟಾಗಿ ಪತಿ ತನ್ನ ನಾಲ್ಕು ವರ್ಷದ ಹೆಣ್ಣು ಮಗುವಿನ ಜೊತೆಗೆ ಸಮುದ್ರಕ್ಕೆ ಹಾರಿ ಸಾಯಲು ಹೋಗಿದ್ದು ಅದರ ವಿಡಿಯೋ ಮಾಡಿ ವಾಟ್ಸಪ್ ಗ್ರೂಪಿಗೆ ಹಾಕಿದ್ದಲ್ಲದೆ ಬಳಿಕ ತನ್ನ ಮನೆಗೆ ಬಂದು ನೇಣು ಹಾಕಲು ಯತ್ನಿಸಿದಾಗ ಪೊಲೀಸರು ಕೂಡಲೇ ಎಚ್ಚತ್ತುಕೊಂಡು ಆತನನ್ನು ಸಾವಿನ ದವಡೆಯಿಂದ ಪಾರು ಮಾಡಿದ ಘಟನೆ ಮಂಗಳೂರಿನ ಕಾವೂರಿನಲ್ಲಿ ನಡೆದಿದೆ. ಕಾವೂರು ಶಾಂತಿನಗರ ನಿವಾಸಿ ರಾಜೇಶ್ ಸಾಯಲು ಹೋಗಿ ಪಣಂಬೂರು ಪೊಲೀಸರಿಂದ ರಕ್ಷಿಸಲ್ಪಟ್ಟ ವ್ಯಕ್ತಿ.  ಈತ ಬಜ್ಪೆಯ ಯುವತಿಯನ್ನು ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು ದಂಪತಿಗೆ ನಾಲ್ಕು ವರ್ಷದ ಹೆಣ್ಣು ಮಗು ಇದೆ.  ಇತ್ತೀಚೆಗೆ ಕೆಲವು ಸಮಯದಿಂದ ಗಂಡ ತನ್ನ ಪತ್ನಿಯ ಬಗ್ಗೆ ಅನುಮಾನ ಪಟ್ಟಿದ್ದ ಎನ್ನಲಾಗಿದೆ.

ನವಂಬರ್ 3ರಂದು ಸೋಮವಾರ ಸಂಜೆ ಯುವಕ ತನ್ನ ಮಗಳನ್ನು ಕರೆದುಕೊಂಡು ತಣ್ಣೀರುಬಾವಿ ಬೀಚ್ ಗೆ ಹೋಗಿದ್ದು ನಾವು ಸಾಯೋಣ ಮಗಳೇ, ಅವಳಿಗೆ ಬೇಕಾದ ರೀತಿ ಇರಲಿ, ನಿನ್ನ ತಾಯಿ ಸರಿ ಇಲ್ಲ. ನಮಗೆ ಯಾರೂ ಬೇಡ ಎನ್ನುತ್ತ ನೀರಿನತ್ತ ನಡೆಯುವ ರೀತಿ ವಿಡಿಯೋ ಮಾಡಿದ್ದಾನೆ. ಅಲ್ಲದೆ, ವಿಡಿಯೋವನ್ನು ತನ್ನ ಅಕ್ಕ ಮತ್ತು ಇತರ ಸಂಬಂಧಿಕರಿಗೂ ಕಳುಹಿಸಿದ್ದಾನೆ.  ವಿಡಿಯೋ ಕ್ಷಣಾರ್ಧದಲ್ಲಿ ವಾಟ್ಸಪ್ ನಲ್ಲಿ ಷೇರ್ ಆಗಿದ್ದು ಏಳು ಗಂಟೆ ವೇಳೆಗೆ ಪಣಂಬೂರು ಪೊಲೀಸರಿಗೆ ತಲುಪಿತ್ತು.‌ ಆದರೆ ವಿಡಿಯೋದಲ್ಲಿ ಅವನ ಮುಖ ಇರಲಿಲ್ಲ. ಕೇವಲ ಸಮುದ್ರದ ನೀರಿನ ಕಡೆಗೆ ನಡೆಯುತ್ತಾ ಹೋಗುವುದು, ಅದರಲ್ಲಿ ತಂದೆ- ಮಗಳ ನೆರಳು ಮಾತ್ರ ಇತ್ತು.

ಪಣಂಬೂರು ಬೀಚ್ ಇರಬೇಕೆಂದು ಪೊಲೀಸರು ಕೂಡಲೇ ಅಲ್ಲಿಗೆ ತೆರಳಿ ಹುಡುಕಾಟ ನಡೆಸಿದ್ದಾರೆ. ಇನ್ಸ್ ಪೆಕ್ಟರ್ ಮಹಮ್ಮದ್ ಸಲೀಂರವರು ವಿಡಿಯೋವನ್ನು ನೋಡಿ, ತಣ್ಣೀರುಬಾವಿ ಆಗಿರಬೇಕೆಂದು ಠಾಣೆಯಲ್ಲಿದ್ದ ಎಲ್ಲ ಸಿಬಂದಿಗಳನ್ನು ಹುಡುಕಲು ಸೂಚಿಸಿದ್ದಾರೆ.

ಸೈಬರ್ ಪೊಲೀಸ್ ಸಹಾಯ ಪಡೆದು ಆತನ ನಂಬರ್ ಟ್ರೇಸ್ ಮಾಡಿ ಲೊಕೇಶನ್ ನೋಡಿದಾಗ ಕಾವೂರು ಶಾಂತಿನಗರ ಎಂದು ತೋರಿಸಿತ್ತು. ಕೂಡಲೇ ಕಾವೂರು ಠಾಣೆಗೆ ತಿಳಿಸಿ ಪಣಂಬೂರು ಠಾಣೆಯ ಇನ್ನೊಂದು ತಂಡವನ್ನು ಆ ಜಾಗಕ್ಕೆ ಇನ್ಸ್ ಪೆಕ್ಟರ್ ಸಲೀಂರವರು ಕಳಿಸಿಕೊಟ್ಟಿದ್ದರು.  ಫಕೀರಪ್ಪ, ಶರಣಪ್ಪ ಮತ್ತು ರಾಕೇಶ್ ಅವರಿದ್ದ ಪಣಂಬೂರು ಪೊಲೀಸರು ತಕ್ಷಣವೇ ಅಲ್ಲಿಗೆ ತಲುಪಿ ಮನೆ ಪತ್ತೆ ಮಾಡಿದ್ದರು. ಮನೆಗೆ ಬಾಗಿಲು ಹಾಕಿದ್ದು ಹೊರಗಿನಿಂದ ಬಡಿದರೂ ಸ್ಪಂದನೆ ಬರಲಿಲ್ಲ. ಹೀಗಾಗಿ ಇನ್ಸ್ ಪೆಕ್ಟರ್ ಸೂಚನೆಯಂತೆ, ಮನೆ ಬಾಗಿಲು ಒಡೆದು ಒಳಗೆ ಹೋಗಿದ್ದು ಪಕ್ಕಾಸಿಗೆ ನೇಣು ಹಗ್ಗ ಹಾಕಿ ಮಗಳ ಜೊತೆಗೆ ನೇಣಿಗೆ ಶರಣಾಗಲು ರೆಡಿ ಮಾಡಿಕೊಳ್ಳುತ್ತಿದ್ದ‌. ಪೊಲೀಸರು ಕೂಡಲೇ ಆತನನ್ನು ಹಿಡಿದುಕೊಂಡಿದ್ದು ಕೆಲವೇ ಕ್ಷಣಗಳಲ್ಲಿ ಸಾಯುತ್ತಿದ್ದ ತಂದೆ- ಮಗಳ ಜೀವವನ್ನು ರಕ್ಷಣೆ ಮಾಡಿದ್ದಾರೆ.

ಕಾವೂರು ಠಾಣೆಯಲ್ಲಿ ಮಂಗಳವಾರ ಗಂಡ- ಹೆಂಡತಿ ಇಬ್ಬರನ್ನೂ ಕರೆಸಿ ಪೊಲೀಸರು ಬುದ್ಧಿವಾದ ಹೇಳಿ ಮಾತುಕತೆ ನಡೆಸಿದ್ದಾರೆ. ಒಟ್ಟಿನಲ್ಲಿ ಪಣಂಬೂರು ಪೊಲೀಸರ ಸಕಾಲಿಕ ಪ್ರಯತ್ನ ಮತ್ತು ಸಮಯ ಪ್ರಜ್ಞೆಯಿಂದಾಗಿ ಸಾಯಲು ಮುಂದಾಗಿದ್ದ ಜೀವಗಳು ಉಳಿದುಬಿಟ್ಟಿವೆ. ಇದಕ್ಕಾಗಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸಹಿತ ಪಣಂಬೂರು ಹಾಗೂ ಕಾವೂರು ಪೊಲೀಸ್ ತಂಡಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

 

You may also like

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು

You cannot copy content of this page