ಸಂತ ಫ್ರಾನ್ಸಿಸ್ ಕ್ಸೇವಿಯರ್ ಅವಹೇಳನ ಅಕ್ಷಮ್ಯ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವಾಗಲಿ” — ಸಂತೋಷ್ ಡಿಸೋಜ ಬಜ್ಪೆ ಖಂಡನೆ
ಗೋವಾದಲ್ಲಿ ಸಂತ ಫ್ರಾನ್ಸಿಸ್ ಕ್ಸೇವಿಯರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂಬ ಘಟನೆಗೆ ಸಂಬಂಧಿಸಿ ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರಿಯ ಅಧ್ಯಕ್ಷರಾದ ಸಂತೋಷ್ ಡಿಸೋಜ ಬಜ್ಪೆ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಖಂಡಿಸಿದ್ದಾರೆ.

ಈ ಘಟನೆ ಏಪ್ರಿಲ್ ತಿಂಗಳಲ್ಲಿ ವಾಸ್ಕೋದಲ್ಲಿ ನಡೆದ ‘ಭಗವಾನ್ ಪರಶುರಾಮ ಜನ್ಮೋತ್ಸವ’ ಕಾರ್ಯಕ್ರಮದ ವೇಳೆ ಸಂಭವಿಸಿದೆ ಎನ್ನಲಾಗಿದ್ದು, ಮಾತನಾಡಿದ ಗೌತಮ್ ಕಟ್ಟರ್ ಅವರು ಸಂತ ಫ್ರಾನ್ಸಿಸ್ ಕ್ಸೇವಿಯರ್ ಅವರನ್ನು ಅವಹೇಳನಕಾರಿ ಪದಗಳಿಂದ ಉಲ್ಲೇಖಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಈ ಹೇಳಿಕೆಯು ದೇಶದಾದ್ಯಂತ ಕ್ರೈಸ್ತ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಪ್ರಯತ್ನವಾಗಿದೆ ಎಂದು ಸಂತೋಷ್ ಡಿಸೋಜ ಅವರು ಅಭಿಪ್ರಾಯಪಟ್ಟಿದ್ದಾರೆ.

“ಸಂತ ಫ್ರಾನ್ಸಿಸ್ ಕ್ಸೇವಿಯರ್ ಅವರು ಶಾಂತಿ, ಸೇವೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕ. ಇಂತಹ ಮಹಾನ್ ಸಂತರನ್ನು ಅವಹೇಳನ ಮಾಡುವುದು ಅಕ್ಷಮ್ಯ. ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.
ಇದಲ್ಲದೆ, ಇಂತಹ ಘಟನೆಗಳು ಸಮಾಜದ ಸೌಹಾರ್ದತೆಗೆ ಧಕ್ಕೆ ತರುತ್ತವೆ ಎಂದು ಎಚ್ಚರಿಸಿರುವ ಅವರು, ಸರ್ಕಾರವು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಶಾಂತಿ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಈಗಾಗಲೇ ಪ್ರಕರಣವನ್ನು ತನಿಖೆಗೆ ಒಳಪಡಿಸಲಾಗಿದೆ.
ಎಲ್ಲಾ ಧರ್ಮಗಳ ಭಾವನೆಗಳನ್ನು ಪರಸ್ಪರ ಗೌರವಿಸುವ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಸಹಬಾಳ್ವೆ ಉಳಿಸಬೇಕೆಂದು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಪತ್ರಿಕಾ ಪ್ರಕಟನೆಯ ಮೂಲಕ ಮನವಿ ಮಾಡಿದೆ.



