July 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಮಾಜದ ಶಾಂತಿಗೆ ಜವಾಬ್ದಾರಿಯುತ ಮಾಧ್ಯಮ ಅಗತ್ಯ – ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

ಸಮಾಜದಲ್ಲಿ ಶಾಂತಿ, ಸೌಹಾರ್ದ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸೂಕ್ಷ್ಮ ವಿಚಾರಗಳ ವರದಿಗಾರಿಕೆಯಲ್ಲಿ ಮಾಧ್ಯಮಗಳು ವಸ್ತುನಿಷ್ಠತೆ, ಜವಾಬ್ದಾರಿ ಹಾಗೂ ಪಾರದರ್ಶಕತೆಯನ್ನು ಕಾಪಾಡಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ಕರೆ ನೀಡಿದರು. ಮಂಗಳೂರು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಹೆಚ್ಚುತ್ತಿರುವ ಮತೀಯ ಉದ್ವಿಗ್ನತೆ ಮತ್ತು ಸೂಕ್ಷ್ಮ ವಿಚಾರಗಳ ಕುರಿತು ವರದಿ ಮಾಡುವಾಗ ಮಾಧ್ಯಮಗಳು ಅತ್ಯಂತ ಎಚ್ಚರಿಕೆ ವಹಿಸಬೇಕು. ಜನರಲ್ಲಿ ಧನಾತ್ಮಕ ಚಿಂತನೆ ಬೆಳೆಸುವ ಸುದ್ದಿಗಳಿಗೆ ಆದ್ಯತೆ ನೀಡುವ ಮೂಲಕ ಸಮಾಜದ ಶಾಂತಿಗೆ ಕೊಡುಗೆ ನೀಡಬೇಕು ಎಂದು ಅವರು ಸಲಹೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ವಸ್ತುನಿಷ್ಠ ಹಾಗೂ ವೃತ್ತಿಪರ ವರದಿಗಾರಿಕೆಯನ್ನು ನಡೆಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ನ್ಯೂಸ್-18 ಕನ್ನಡ ಪ್ರಧಾನ ಸಂಪಾದಕ ಹರಿಪ್ರಸಾದ್ ಅಡ್ಪಂಗಾಯ, “ಇಂದಿನ ಡಿಜಿಟಲ್ ಯುಗದಲ್ಲಿ ಸುಳ್ಳು ಸುದ್ದಿ ಮತ್ತು ಗಾಳಿಸುದ್ದಿಗಳನ್ನು ತಡೆಯುವುದೇ ಪತ್ರಿಕೋದ್ಯಮದ ದೊಡ್ಡ ಸವಾಲಾಗಿದೆ” ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ವಿ. ಕರಿಕಾಲನ್, ಮಂಗಳೂರು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಪತ್ರಕರ್ತರ ಕೋರಿಕೆಯಂತೆ ಕುದುರೆಮುಖ ಟ್ರೆಕ್ಕಿಂಗ್ ವ್ಯವಸ್ಥೆ ಕಲ್ಪಿಸುವ ಭರವಸೆಯನ್ನೂ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಪತ್ರಿಕೆ ವಿತರಕರಾದ ತಿಮ್ಮಪ್ಪ ಶೆಟ್ಟಿ ಎಕ್ಕೂರು ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್. ಅವರು ವಹಿಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

You may also like

News

ಕೆನರಾ ಬ್ಯಾಂಕ್ ₹8 ಲಕ್ಷ ಸಾಲ – ಲೋಕ ಅದಾಲತ್‌ನಲ್ಲಿ ₹15 ಸಾವಿರಕ್ಕೆ ಇತ್ಯರ್ಥ

ಮಾನವೀಯತೆ ಮೆರೆದ ನ್ಯಾಯಾಲಯ ಕಾನೂನು ಕೇವಲ ನಿಯಮಗಳ ಸಂಕಲನ ಮಾತ್ರವಲ್ಲ, ಅದರ ಹಿಂದೆ ಮಾನವೀಯತೆಯ ಹೃದಯವೂ ಇದೆ ಎಂಬುದನ್ನು ಚಿಕ್ಕಮಗಳೂರಿನಲ್ಲಿ ನಡೆದ ಒಂದು ಅಪರೂಪದ ಘಟನೆ ಮತ್ತೊಮ್ಮೆ
News

Father Muller Homoeopathic Medical College Hosts Dr M.L. Dhawale Memorial Seminar 2026

The Department of Practice of Medicine, Father Muller Homoeopathic Medical College & Hospital, Deralakatte, Mangalore, organised the Dr M.L. Dhawale

You cannot copy content of this page