September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುದರಂಗಡಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಗೆ ಬಲಿ

ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿರುವ ಘಟನೆ ಇಂದು ಆಗಸ್ಟ್ 7ರಂದು ಶುಕ್ರವಾರ ಮಧ್ಯಾಹ್ನ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಉಡುಪಿ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದೆ. ಲಭ್ಯ ಮಾಹಿತಿಯ ಪ್ರಕಾರ, ಡೇವಿಡ್ ಡಿಸೋಜ ಅವರು ತಮ್ಮ ವಾಹನದಲ್ಲಿ ತೆರಳುತ್ತಿದ್ದ ವೇಳೆ ಮತ್ತೊಂದು ವಾಹನದಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಡಿಸೋಜ ಅವರನ್ನು ಸ್ಥಳೀಯರು ಹಾಗೂ ಪರಿಚಿತರು ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಿದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರು, ಬೆಂಬಲಿಗರು ಹಾಗೂ ಸಾರ್ವಜನಿಕರು ಆಸ್ಪತ್ರೆಯತ್ತ ಧಾವಿಸಿದ್ದು, ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಪಡುಬಿದ್ರಿ ಪೊಲೀಸರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಿಂದ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುವ ಕಾರ್ಯವೂ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಹತ್ಯೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ವೈಯಕ್ತಿಕ ದ್ವೇಷ, ರಾಜಕೀಯ ವೈಮನಸ್ಸು ಅಥವಾ ಇತರೆ ಯಾವುದೇ ಕಾರಣವಿದೆಯೇ ಎಂಬ ಎಲ್ಲ ಆಯಾಮಗಳಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪಡುಬಿದ್ರಿ ಪೊಲೀಸರು ಆರೋಪಿಗಳ ಶೀಘ್ರ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ. ಡೇವಿಡ್ ಡಿಸೋಜ ಅವರು ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಲ್ಲದೆ, ಕಾಂಗ್ರೆಸ್ ಪಕ್ಷದ ಸಕ್ರಿಯ ಮುಖಂಡ ಹಾಗೂ ಗುತ್ತಿಗೆದಾರರಾಗಿ ಸ್ಥಳೀಯವಾಗಿ ಗುರುತಿಸಿಕೊಂಡಿದ್ದರು. ಅವರ ಹತ್ಯೆ ರಾಜಕೀಯ ವಲಯ ಸೇರಿದಂತೆ ಸಾರ್ವಜನಿಕ ವಲಯದಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.

You may also like

News

₹29 Lakh Donation to Father Muller for Paediatric Cancer Care Through ‘Symphony of Hope’

Music, compassion and community come together to support children battling cancer In a remarkable initiative that brought together music, compassion
News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ

You cannot copy content of this page