September 19, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತುಳುವಿಗೆ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ; ದಕ್ಷಿಣ ಕನ್ನಡಕ್ಕೆ ‘ಮಂಗಳೂರು ಜಿಲ್ಲೆ’ ಹೆಸರು?

ಜನಾಭಿಪ್ರಾಯ ಸಂಗ್ರಹಕ್ಕೆ ರಾಜ್ಯ ಸರ್ಕಾರ ನಿರ್ಧಾರ; ಕರಾವಳಿಗೆ ₹32,611 ಕೋಟಿ ಅಭಿವೃದ್ಧಿ ಯೋಜನೆಗಳ ಘೋಷಣೆ

ಕರಾವಳಿ ಭಾಗದ ಬಹುಕಾಲದ ಬೇಡಿಕೆಗಳಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ತುಳು ಭಾಷೆಗೆ ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಲು ನಿರ್ಧರಿಸಿದೆ. ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಕ್ರಿಯೆಗೂ ಚಾಲನೆ ನೀಡಲಾಗಿದ್ದು, ಈ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಆಹ್ವಾನಿಸಲು ಸರ್ಕಾರ ಮುಂದಾಗಿದೆ.

ಮಂಗಳೂರಿನ ಪ್ರಜಾಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಇಂದು ಸೆಪ್ಟೆಂಬರ್  18ರಂದು ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಒಟ್ಟು ₹32,611 ಕೋಟಿ ಮೊತ್ತದ ಯೋಜನೆಗಳು ಮತ್ತು ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಲ್ಲಿ ಗ್ರಾಮೀಣಾಭಿವೃದ್ಧಿಗೆ ಸುಮಾರು ₹16,000 ಕೋಟಿ ಮೊತ್ತದ ಯೋಜನೆಗಳು ಸೇರಿವೆ.

ತುಳುವಿಗೆ ಆಡಳಿತ ಭಾಷೆಯ ಸ್ಥಾನಮಾನ:

ತುಳು ಭಾಷೆಗೆ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವುದು ಕರಾವಳಿ ಭಾಗದ ಬಹುದಿನಗಳ ಬೇಡಿಕೆಗೆ ಸರ್ಕಾರದ ಸ್ಪಂದನೆಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಳು ಹೆಚ್ಚುವರಿ ಆಡಳಿತ ಭಾಷೆಯಾಗಿ ಅನ್ವಯವಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ತುಳು ಭಾಷೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ಬಳಕೆಗೆ ಅಗತ್ಯವಿರುವ ಅನುವಾದ, ತರಬೇತಿ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ಸರ್ಕಾರ ಅನುದಾನ ಒದಗಿಸುವುದಾಗಿ ವರದಿಯಾಗಿದೆ. ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಬೇಡಿಕೆ ಹಲವು ವರ್ಷಗಳಿಂದ ಮುಂದುವರಿದಿತ್ತು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬೇಡಿಕೆಗೆ ಹಿಂದೆ ಧ್ವನಿ ಎತ್ತಿದ ಮಾಜಿ ಸಚಿವ ರಮಾನಾಥ ರೈ, ಸಚಿವ ಯು.ಟಿ. ಖಾದರ್, ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಹಾಗೂ ಹೋರಾಟ ನಡೆಸಿದವರ ಕೊಡುಗೆಯನ್ನು ಸ್ಮರಿಸಿದರು.

‘ದಕ್ಷಿಣ ಕನ್ನಡ’ ಇನ್ನು ‘ಮಂಗಳೂರು ಜಿಲ್ಲೆ’?

ಇದೇ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಲಾಗಿದೆ.

ಮಂಗಳೂರು ನಗರವು ದೇಶ-ವಿದೇಶಗಳಲ್ಲಿ ವ್ಯಾಪಕವಾಗಿ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಬದಲಿಸುವ ಕುರಿತು ಬೇಡಿಕೆಗಳು ಬಂದಿವೆ. ಈ ಸಂಬಂಧ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿ ಒಂದು ತಿಂಗಳ ಕಾಲ ಸಾರ್ವಜನಿಕರಿಂದ ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಸ್ವೀಕರಿಸಲಿದೆ. ಬಳಿಕ ಜನಾಭಿಪ್ರಾಯವನ್ನು ಪರಿಗಣಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ನೀತಿ:

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರವಾಸೋದ್ಯಮ ಯೋಜನೆಗಳನ್ನು ಮೂಲಸೌಕರ್ಯ ಯೋಜನೆಗಳೆಂದು ಪರಿಗಣಿಸಿ ಹೂಡಿಕೆದಾರರಿಗೆ ಹೆಚ್ಚಿನ ಪ್ರೋತ್ಸಾಹ, ಸಾಲ ಮರುಪಾವತಿಗೆ ಹೆಚ್ಚುವರಿ ಸಮಯ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶ ಹೊಂದಿದೆ.

ಮೀನುಗಾರಿಕೆಗೆ ‘ಬ್ಲೂ ಎಕಾನಮಿ’ ಉತ್ತೇಜನ:

ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಫಿಶರೀಸ್ ಮತ್ತು ಬ್ಲೂ ಎಕಾನಮಿ ವಿಶ್ವವಿದ್ಯಾಲಯ ಸ್ಥಾಪಿಸುವ ಪ್ರಸ್ತಾವನೆಗೂ ಒಪ್ಪಿಗೆ ದೊರೆತಿದೆ. ಮೀನುಗಾರಿಕಾ ಕಾಲೇಜಿನ ಪ್ರವೇಶ ಸಾಮರ್ಥ್ಯವನ್ನು 60ರಿಂದ 200 ಸೀಟುಗಳಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ಇದಲ್ಲದೆ ಪುತ್ತೂರಿನಲ್ಲಿ ₹549 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ 150 ಎಕರೆ ಪ್ರದೇಶದಲ್ಲಿ ಮೀನುಗಾರಿಕಾ ಪಾರ್ಕ್ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೂ ಅನುಮೋದನೆ ದೊರೆತಿದೆ.

15 ತಿಂಗಳಲ್ಲಿ 10–12 ಕಡೆ ಸಂಪುಟ ಸಭೆ:

ಮಂಗಳೂರಿನಲ್ಲಿ ಬೆಂಗಳೂರಿನ ಹೊರಗೆ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಿರುವ ರಾಜ್ಯ ಸರ್ಕಾರ, ಮುಂದಿನ 15 ತಿಂಗಳಲ್ಲಿ 10ರಿಂದ 12 ಸ್ಥಳಗಳಲ್ಲಿ ಸಚಿವ ಸಂಪುಟ ಸಭೆ ನಡೆಸುವ ಉದ್ದೇಶ ಹೊಂದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಅಗತ್ಯ ಮತ್ತು ಸಾಮರ್ಥ್ಯ ಇರುವ ಪ್ರದೇಶಗಳಲ್ಲಿ ಇಂತಹ ಸಭೆಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಕರಾವಳಿಯ ಅಭಿವೃದ್ಧಿ, ತುಳು ಭಾಷೆಗೆ ಆಡಳಿತಾತ್ಮಕ ಮಾನ್ಯತೆ ಮತ್ತು ದಕ್ಷಿಣ ಕನ್ನಡದ ಮರುನಾಮಕರಣದ ಪ್ರಸ್ತಾವನೆ—ಮಂಗಳೂರಿನಲ್ಲಿ ನಡೆದ ಈ ಸಚಿವ ಸಂಪುಟ ಸಭೆಯ ಪ್ರಮುಖ ಅಂಶಗಳಾಗಿ ಗಮನ ಸೆಳೆದಿವೆ.

You may also like

News

ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿಗೆ A+ ಮಾನ್ಯತೆ

ಶೈಕ್ಷಣಿಕ ಶ್ರೇಷ್ಠತೆ, ಸಂಶೋಧನೆ ಹಾಗೂ ಗುಣಮಟ್ಟದ ಹೋಮಿಯೋಪಥಿಕ್ ಶಿಕ್ಷಣಕ್ಕೆ ಪ್ರತಿಷ್ಠಿತ ಗೌರವ ಮಂಗಳೂರು: ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು 2025–26ನೇ ಶೈಕ್ಷಣಿಕ ಸಾಲಿನಲ್ಲಿ ಹೋಮಿಯೋಪಥಿ ರಾಷ್ಟ್ರೀಯ
News

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಜೆಪ್ಪುವಿನ ಸಂತ ಆಂಥೋನಿ ಆಶ್ರಮದ 350 ಆಶ್ರಿತರಿಗೆ ಹಣ್ಣುಹಂಪಲು ವಿತರಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 76ನೇ ಜನ್ಮದಿನದ ಅಂಗವಾಗಿ ನಡೆಯುತ್ತಿರುವ ‘ಸೇವಾಸಂಕಲ್ಪ ಅಭಿಯಾನ’ದ ಭಾಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಜೆಪ್ಪುವಿನ

You cannot copy content of this page