ಬಿ.ಸಿ. ರೋಡ್ ಪ್ರತಿಭಟನೆಗೆ ಬಿಗಿ ಪೊಲೀಸ್ ಬಂದೋಬಸ್ತ್
ಪೊಲೀಸ್ ಪಥಸಂಚಲನ; 8 ಪೊಲೀಸ್ ನಿರೀಕ್ಷಕರು, 23 ಪಿಎಸ್‌ಐ ಸೇರಿದಂತೆ 260ಕ್ಕೂ ಅಧಿಕ ಅಧಿಕಾರಿ-ಸಿಬ್ಬಂದಿ ನಿಯೋಜನೆ

ಬಂಟ್ವಾಳ: ಸೆಪ್ಟೆಂಬರ್ 28ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಸಿ. ರೋಡ್ ಬಳಿ ನಡೆಯಲಿರುವ ಪ್ರತಿಭಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ನಿನ್ನೆ ಸೆಪ್ಟೆಂಬರ್ 27ರಂದು ಬಿ.ಸಿ. ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಯಿತು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳೀಯ ಪರಿಸ್ಥಿತಿಯನ್ನು ಪರಿಶೀಲಿಸಿ ಬಂದೋಬಸ್ತ್ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ.

260ಕ್ಕೂ ಅಧಿಕ ಅಧಿಕಾರಿ-ಸಿಬ್ಬಂದಿ ನಿಯೋಜನೆ:
ಬಂದೋಬಸ್ತ್ ಕರ್ತವ್ಯಕ್ಕಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಸಹಾಯಕ ಪೊಲೀಸ್ ಅಧೀಕ್ಷಕರು ಸೇರಿದಂತೆ ಒಟ್ಟು 260ಕ್ಕೂ ಅಧಿಕ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನಿಯೋಜಿಸಲಾದ ಸಿಬ್ಬಂದಿಯ ವಿವರ ಹೀಗಿದೆ:
- ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 01
- ಸಹಾಯಕ ಪೊಲೀಸ್ ಅಧೀಕ್ಷಕರು – 01
- ಪೊಲೀಸ್ ನಿರೀಕ್ಷಕರು – 08
- ಪೊಲೀಸ್ ಉಪನಿರೀಕ್ಷಕರು – 23
- ಸಹಾಯಕ ಪೊಲೀಸ್ ಉಪನಿರೀಕ್ಷಕರು – 34
- ಪೊಲೀಸ್ ಸಿಬ್ಬಂದಿ – 184
- ಹೋಮ್‌ಗಾರ್ಡ್ – 05

ಇದರ ಜೊತೆಗೆ ವಿಶೇಷ ಪೊಲೀಸ್ ಪಡೆಗಳನ್ನೂ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
- ಎಸ್‌ಎಎಫ್ ತುಕಡಿ – 02
- ಡಿಎಆರ್ ತುಕಡಿ – 03
- ಕೆಎಸ್‌ಆರ್‌ಪಿ ತುಕಡಿ – 04

ಪ್ರತಿಭಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿ.ಸಿ. ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಕ್ಷತೆ, ಸಂಚಾರ ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಪ್ರತಿಭಟನೆಯಲ್ಲಿ ಭಾಗವಹಿಸುವವರು ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.



