ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ – 9 ಮಂದಿಗೆ ಗಾಯ; ಬೆಂಕಿ ನಿಯಂತ್ರಣಕ್ಕೆ
ಜಿಲ್ಲಾಧಿಕಾರಿಗಳು, ಪೊಲೀಸ್ ಕಮೀಷನರ್ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಧಿಡೀರ್ ಭೇಟಿ

ಮಂಗಳೂರು ನಗರದ ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ (CHTU) ಇಂದು ಸೆಪ್ಟೆಂಬರ್ 30ರಂದು ಬುಧವಾರ ಮಧ್ಯಾಹ್ನ ಸುಮಾರು 12.15ರ ವೇಳೆಗೆ ಭಾರೀ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.



ಹೆಚ್ಚಿನ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಘಟಕದ ‘ಕೋಲ್ಡ್ ಸೆಪರೇಟರ್’ ಒಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಎಂಆರ್‌ಪಿಎಲ್‌ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸ್ಫೋಟದ ಬಳಿಕ ಘಟಕದ ಪ್ರದೇಶವನ್ನು ಪ್ರತ್ಯೇಕಿಸಲಾಗಿದ್ದು, ಎಂಆರ್‌ಪಿಎಲ್‌ನ ತುರ್ತು ಪ್ರತಿಕ್ರಿಯಾ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.


ಘಟನೆಯಲ್ಲಿ 9 ಮಂದಿ ಗಾಯಗೊಂಡಿರುವ ಮಾಹಿತಿ ವಿವಿಧ ಹಂತಗಳಲ್ಲಿ ಲಭ್ಯವಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಎಂಟು ಮಂದಿ ಗಾಯಗೊಂಡಿರುವುದಾಗಿ ತಿಳಿಸಿದ್ದಾರೆ. ಇವರಲ್ಲಿ ರಾಜೇಶ್ ಬ್ಯಾಪ್ಟಿಸ್ಟ್ ಅವರಿಗೆ ಸುಮಾರು 35 ಶೇಕಡಾ ಸುಟ್ಟ ಗಾಯಗಳಾಗಿದ್ದು, ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಸ್ಫೋಟ ಸಂಭವಿಸಿದ ಘಟಕದ ಪಕ್ಕದ ಕಚೇರಿಯಲ್ಲಿದ್ದ ಆರು ಮಂದಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಗಾಯಗೊಂಡ ಎಲ್ಲರಿಗೂ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಫೋಟದ ತೀವ್ರತೆಗೆ ಜೋಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೆಲವು ಮನೆಗಳು, ಶಾಲೆಗಳು ಹಾಗೂ ಪಂಚಾಯತ್ ಕಟ್ಟಡಗಳಲ್ಲಿ ಕಿಟಕಿ ಗಾಜು ಒಡೆದುಹೋಗಿರುವುದು ಮತ್ತು ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಥಳೀಯರು ಎಂಆರ್‌ಪಿಎಲ್ ಮುಂಭಾಗ ಜಮಾಯಿಸಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಶಾಲೆಗಳಿಗೆ ರಜೆ ಘೋಷಿಸಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಾದ ದರ್ಶನ್ ಎಚ್.ವಿ., ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ನರ್ವಡೆ ವಿನಾಯಕ್ ಕಾರ್ಭಾರಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.


ಘಟನೆಯ ನಿಖರ ಕಾರಣದ ಕುರಿತು ಪರಿಶೀಲನೆ ಮುಂದುವರಿದಿದ್ದು, ಹೆಚ್ಚಿನ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ. ಎಂಆರ್‌ಪಿಎಲ್ ಪ್ರಕಟಣೆಯ ಪ್ರಕಾರ, ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸಿಬ್ಬಂದಿ ಹಾಗೂ ಘಟಕದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.


ಹಿಂದಿನ ಘಟನೆಗಳ ಹಿನ್ನೆಲೆಯಲ್ಲಿ ಮತ್ತೆ ಆತಂಕ: 2025ರ ಜುಲೈನಲ್ಲಿ ಎಂಆರ್‌ಪಿಎಲ್‌ನ ಆಯಿಲ್ ಮೂವ್‌ಮೆಂಟ್ ಏರಿಯಾ (OMS)ನಲ್ಲಿ ಪರಿಶೀಲನೆ ವೇಳೆ ಹೈಡ್ರೋಜನ್ ಸಲ್ಫೈಡ್ (H₂S) ವಿಷಾನಿಲ ಸೋರಿಕೆಯಾಗಿ ಇಬ್ಬರು ಹಿರಿಯ ಆಪರೇಟರ್‌ಗಳು ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ನಿರ್ಲಕ್ಷ್ಯದ ಆರೋಪದ ಮೇಲೆ ಫ್ಯಾಕ್ಟರಿ ಮ್ಯಾನೇಜರ್ ಸೇರಿದಂತೆ ಆರು ಎಂಆರ್‌ಪಿಎಲ್ ಅಧಿಕಾರಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು ಎಂದು ನೀಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ.



