ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ; ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ – ರಿಜಿಸ್ಟ್ರಾರ್ ಶುಭರೇಖಾ
ದಸರಾ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ನಡೆಸಿದರು.

ಅಕ್ಟೋಬರ್ 12ರಿಂದ ಅಕ್ಟೋಬರ್ 28ರವರೆಗೆ ಪರೀಕ್ಷೆ ನಿಗದಿಪಡಿಸಿರುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಸಂಘಟನೆಯೂ ಬೆಂಬಲ ನೀಡಿತು.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಪ್ರತಿನಿಧಿಗಳೂ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಎಬಿವಿಪಿ ಕಾರ್ಯಕರ್ತರೊಬ್ಬರನ್ನು ಪೊಲೀಸರು ಕರೆದೊಯ್ಯುತ್ತಿದ್ದಾಗ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ಪೊಲೀಸ್ ವಾಹನಕ್ಕೆ ಅಡ್ಡಿಪಡಿಸಿದ ಘಟನೆ ನಡೆಯಿತು.

ಬಳಿಕ ಕಾಲೇಜಿನ ರಿಜಿಸ್ಟ್ರಾರ್ ಶುಭರೇಖಾ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.
ಕೊನೆಗೆ ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿದ ಕಾಲೇಜು ಆಡಳಿತ ಮಂಡಳಿ ಅಕ್ಟೋಬರ್ 19 ಮತ್ತು 22ರಂದು ನಿಗದಿಯಾಗಿದ್ದ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲು ಸಮ್ಮತಿಸಿದೆ. ಅಲ್ಲದೆ, ಎರಡು ದಿನಗಳ ರಜೆಯ ಜೊತೆಗೆ ಅಕ್ಟೋಬರ್ 18, 20 ಮತ್ತು 21ರಂದು ಸರ್ಕಾರಿ ರಜೆ ಇರುವುದರಿಂದ ಒಟ್ಟು ಐದು ದಿನಗಳ ರಜೆ ನೀಡಲು ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದೆ ಎಂದು ಪರೀಕ್ಷಾಂಗ ಮುಖ್ಯಸ್ಥೆ ಹಾಗೂ ರಿಜಿಸ್ಟ್ರಾರ್ ಶುಭರೇಖಾ ತಿಳಿಸಿದ್ದಾರೆ.


ವಿದ್ಯಾರ್ಥಿಗಳ ಪ್ರತಿಭಟನೆಯ ಬಳಿಕ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿರುವುದು ದಸರಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನಿರಾಳತೆ ತಂದಿದೆ.



