‘ಪೊಲೀಸ್–ATS’ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ – ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಮುಂಬೈ ಪೊಲೀಸ್ ಹಾಗೂ ATS ಅಧಿಕಾರಿಗಳೆಂದು ಪರಿಚಯಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹1,31,50,000 ಹಣ ವಂಚಿಸಿರುವ ಘಟನೆ ನಡೆದಿದೆ.

ಆರೋಪಿಗಳು ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ದೂರುದಾರರ ಮೇಲೆ ಸುಳ್ಳು ಆರೋಪ ಹೊರಿಸಿ, ಬಂಧನದ ಭೀತಿ ಹುಟ್ಟಿಸಿದ್ದಾರೆ ಎನ್ನಲಾಗಿದೆ. ಬಳಿಕ WhatsApp ವಿಡಿಯೋ ಕರೆಗಳ ಮೂಲಕ ನಿರಂತರವಾಗಿ ಬೆದರಿಸಿ, ಬ್ಯಾಂಕ್ ಖಾತೆಗಳ ಪರಿಶೀಲನೆ ಹಾಗೂ ಹಣದ ದೃಢೀಕರಣದ ನೆಪದಲ್ಲಿ ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

ಆರೋಪಿಗಳ ಮಾತನ್ನು ನಂಬಿದ ದೂರುದಾರರು 2026ರ ಸೆಪ್ಟೆಂಬರ್ 2ರಿಂದ ಅಕ್ಟೋಬರ್ 6ರವರೆಗೆ ಹಂತ ಹಂತವಾಗಿ ಒಟ್ಟು ₹1,31,50,000 ಹಣವನ್ನು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಬಳಿಕ ತಾವು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ದೂರುದಾರರು ಸೈಬರ್ ಸಹಾಯವಾಣಿ 1930ಕ್ಕೆ ಕರೆ ಮಾಡಿ ದೂರು ನೀಡಿದ್ದಾರೆ.

ಈ ಕುರಿತು CCPS DK ಅ.ಕ್ರ. 42/2026ರಂತೆ ಐಟಿ ಕಾಯ್ದೆಯ ಸೆಕ್ಷನ್ 66(C), 66(D) ಹಾಗೂ BNSನ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ನಡೆಯುತ್ತಿರುವ ಸೈಬರ್ ವಂಚನೆಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸೂಚಿಸಿದ್ದಾರೆ.



