ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ – ಆರೋಪಿಗೆ ಕಠಿಣ ಶಿಕ್ಷೆ
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹50,000 ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
2021ರ ಮೇ 8ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 40/2021ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಭಾರತೀಯ ದಂಡ ಸಂಹಿತೆಯ ಕಲಂ 376(2)(f)(n), 376(3), 506 ಹಾಗೂ ಪೋಕ್ಸೊ ಕಾಯ್ದೆಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು.

ಅಂದಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿದ್ದ ಉಮೇಶ್ ಯು. ಅವರು ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ಕಡಬದ ರಾಮಕುಂಜ ನಿವಾಸಿ 30 ವರ್ಷ ಪ್ರಾಯದ ಶೇಖರ್ ಅಲಿಯಾಸ್ ಸೇಸಪ್ಪ ಎಂಬಾತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆಯವರಾದ ಸುಮಂಗಲಾ ಚಕಲಬ್ಬಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.

ಪೋಕ್ಸೊ ಕಾಯ್ದೆ 2012ರ ಕಲಂ 5(ಎಲ್) ಸಹವಾಚನ 6ರ ಅಡಿಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಒಂದು ವರ್ಷದ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಲಾಗಿದೆ.
ಇನ್ನು, ಭಾರತೀಯ ದಂಡ ಸಂಹಿತೆಯ ಕಲಂ 506ರ ಅಡಿಯಲ್ಲಿ ಜೀವ ಬೆದರಿಕೆ ಒಡ್ಡಿದ ಅಪರಾಧಕ್ಕಾಗಿ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಒಂದು ವರ್ಷದ ಸಾಧಾರಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಈ ಮೂಲಕ ಆರೋಪಿಗೆ ಒಟ್ಟು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಲಾಗಿದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಆಡ್ಯಂತಾಯ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.




