ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ನ್ಯಾಯಾಲಯದ ಕಠಿಣ ಶಿಕ್ಷೆ – ಕಡಬದ ಆರೋಪಿಗೆ 20 ವರ್ಷ ಜೈಲು
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹75,000 ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪುತ್ತೂರು ಕಾರ್ಯವ್ಯಾಪ್ತಿ) ತೀರ್ಪು ನೀಡಿದೆ.
ಕಡಬ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬದ ನೂಜಿಬಾಳ್ತಿಲ ನಿವಾಸಿ 34 ವರ್ಷ ಪ್ರಾಯಾದ ಸದ್ದಾಂ ಶಿಕ್ಷೆಗೊಳಗಾದ ಆರೋಪಿ.

ಆರೋಪಿಯು ಅಪ್ರಾಪ್ತ ಬಾಲಕಿಯ ಮನೆಗೆ ತೆರಳಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪದಡಿ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 24/2019ರಂತೆ ಪ್ರಕರಣ ದಾಖಲಾಗಿತ್ತು. ಅಂದಿನ ಉಪ್ಪಿನಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕೆ. ಅವರು ಪ್ರಕರಣದ ತನಿಖೆ ನಡೆಸಿ, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.

ಶಿಕ್ಷೆಯ ವಿವರ:
- ಪೋಕ್ಸೋ ಕಾಯ್ದೆಯ ಸೆಕ್ಷನ್ 5(ಎಲ್) ಮತ್ತು 5(ಜೆ)(ii) ಜೊತೆಗೆ ಸೆಕ್ಷನ್ 6ರ ಅಡಿಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸಬೇಕು.
- ಐಪಿಸಿ ಸೆಕ್ಷನ್ 506ರ ಅಡಿಯಲ್ಲಿ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.
ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗಲಿವೆ ಎಂದು ನ್ಯಾಯಾಲಯ ಆದೇಶಿಸಿದೆ.

ಆರೋಪಿಯ ವಿರುದ್ಧ ಹಲವು ಪ್ರಕರಣಗಳು ದಾಖಲು:
ಶಿಕ್ಷೆಗೊಳಗಾದ ಸದ್ದಾಂ ಕಡಬ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಆತನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 59/2011, 62/2020, 27/2021, 105/2021 ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 101/2022ರಂತೆ ವಿವಿಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಪುಷ್ಪರಾಜ್ ಅಡಂತ್ಯಾಯ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.




