ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ ಆರೋಪ – ಪಂಪ್ವೆಲ್ ಫ್ಲ್ಯಾಟ್ ಮೇಲೆ ದಾಳಿ
₹15.30 ಲಕ್ಷದ MDMA ಸಹಿತ ಮಹಿಳೆ ಸೆರೆ

ಮಂಗಳೂರು ನಗರದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆಯ ವಾಸ್ತವ್ಯದ ಫ್ಲ್ಯಾಟ್ ಮೇಲೆ ದಾಳಿ ನಡೆಸಿದ ಪೊಲೀಸರು ಬರೋಬ್ಬರಿ ₹15.30 ಲಕ್ಷ ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲದ ಗುರಿಂಗಾನ ಮನೆ ನಿವಾಸಿ 42 ವರ್ಷ ಪ್ರಾಯದ ನಸೀಮಾ ಅಲಿಯಾಸ್ ನಸೀಮ ಎಂದು ಗುರುತಿಸಲಾಗಿದೆ.


ಪಂಪ್ವೆಲ್ನ ಅಪಾರ್ಟ್ಮೆಂಟ್ನಲ್ಲಿ ಶೋಧ:
ನವೆಂಬರ್ 1ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ಸಂದರ್ಭದಲ್ಲಿ, ಆರೋಪಿತರಿಗೆ ಮಾದಕ ವಸ್ತು ಪೂರೈಸುತ್ತಿದ್ದ ನಸೀಮಾ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಮಾದಕ ವಸ್ತು ಪೂರೈಕೆಯ ಜಾಲದ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದರು.
ತನಿಖೆಯ ಆಧಾರದಲ್ಲಿ ಪಂಪ್ವೆಲ್ನ ಉಜ್ಜೋಡಿ ಸಮೀಪದ ರಾಧಾ ರೆಸಿಡೆನ್ಸಿ ಅಪಾರ್ಟ್ಮೆಂಟ್ನ ಮೊದಲ ಮಹಡಿಯಲ್ಲಿರುವ ಫ್ಲ್ಯಾಟ್ ಸಂಖ್ಯೆ 103ಕ್ಕೆ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದರು. ಈ ವೇಳೆ ಸುಮಾರು ₹15,30,000 ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ಯುವಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಆರೋಪ:
ಪೊಲೀಸರ ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿತೆಯು ಮಂಗಳೂರು ನಗರದ ವಿವಿಧ ಭಾಗಗಳಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದಳೆಂಬ ಮಾಹಿತಿ ತಿಳಿದುಬಂದಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಬಂಧಿತೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಪೂರೈಕೆ ಜಾಲದ ಇತರ ಆರೋಪಿಗಳಿಗಾಗಿ ಶೋಧ:
ಈ ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಬಂಧನ ಬಾಕಿಯಿದೆ. ಮಾದಕ ವಸ್ತು ಪೂರೈಕೆಯ ಜಾಲದ ಇತರ ಸಂಪರ್ಕಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಆರೋಪಿತೆಯ ಬಂಧನ ಮತ್ತು ಮಾದಕ ವಸ್ತುಗಳ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ನಗರದಲ್ಲಿ ಯುವಜನತೆ ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಮಾದಕ ವಸ್ತು ಪೂರೈಕೆಯ ಜಾಲದ ವಿರುದ್ಧ ಪೊಲೀಸ್ ಇಲಾಖೆ ತನಿಖೆ ಚುರುಕುಗೊಳಿಸಿದೆ.




