ಮೂರು ದಶಕಗಳ ಪತ್ರಿಕಾ ಸೇವೆಗೆ ಪ್ರತಿಷ್ಠಿತ ಮನ್ನಣೆ
ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಅವರಿಗೆ ರಾಜ್ಯಮಟ್ಟದ ಸಹಕಾರಿ ಸಪ್ತಾಹ ಪ್ರಶಸ್ತಿಯ ಗೌರವ

ಮಂಗಳೂರು: ಪತ್ರಿಕೋದ್ಯಮದಲ್ಲಿ ಮೂರು ದಶಕಗಳಿಗೂ ಅಧಿಕ ಕಾಲ ನಿಷ್ಠೆ, ಬದ್ಧತೆ ಮತ್ತು ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅವರಿಗೆ 73ನೇ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ರಾಜ್ಯಮಟ್ಟದ ಗೌರವ ಪ್ರಶಸ್ತಿ ಲಭಿಸಿದೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪತ್ರಿಕಾ ರಂಗದ ಸೇವೆಯನ್ನು ಗುರುತಿಸಿ ನೀಡಲಾಗುವ ಈ ಪ್ರತಿಷ್ಠಿತ ಪ್ರಶಸ್ತಿಗೆ ಹರೀಶ್ ರೈ ಅವರು ಆಯ್ಕೆಯಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ಸುಮಾರು ಮೂರು ದಶಕಗಳ ಅನುಭವ ಹೊಂದಿರುವ ಹರೀಶ್ ರೈ, ವೃತ್ತಿಪರ ಬದ್ಧತೆ, ಜನಪರ ಕಾಳಜಿ ಹಾಗೂ ಪತ್ರಕರ್ತರ ಸಂಘಟನಾತ್ಮಕ ಚಟುವಟಿಕೆಗಳಲ್ಲಿನ ಸಕ್ರಿಯತೆಯಿಂದ ವಿಶಿಷ್ಟ ಗುರುತನ್ನು ಗಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಹಾಗೂ ಐನೆಕಿದು–ಸುಬ್ರಹ್ಮಣ್ಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಿಜಯವಾಣಿ ದಿನಪತ್ರಿಕೆಯ ಮುಖ್ಯ ವರದಿಗಾರರಾಗಿದ್ದಾರೆ.
ಪತ್ರಿಕೋದ್ಯಮವೆಂಬುದು ಕೇವಲ ಸುದ್ದಿಗಳ ಪ್ರಕಟಣೆಯಲ್ಲ, ಸಮಾಜದ ಆಗುಹೋಗುಗಳಿಗೆ ಸ್ಪಂದಿಸಿ ಜನರ ಧ್ವನಿಯಾಗುವ ಮಹತ್ವದ ಜವಾಬ್ದಾರಿ ಎಂಬುದನ್ನು ತಮ್ಮ ವೃತ್ತಿಜೀವನದ ಮೂಲಕ ಸಾಬೀತುಪಡಿಸಿರುವ ಹರೀಶ್ ರೈ ಅವರ ಸಾಧನೆಗೆ ಈ ಪ್ರಶಸ್ತಿ ಮತ್ತೊಂದು ಗೌರವದ ಗರಿಯಾಗಿದೆ. ಅವರ ಸುದೀರ್ಘ ಸೇವೆ, ವೃತ್ತಿಪರ ಮೌಲ್ಯಗಳು ಮತ್ತು ಪತ್ರಕರ್ತರ ಹಿತಾಸಕ್ತಿಗಾಗಿ ಸಲ್ಲಿಸಿರುವ ಕೊಡುಗೆಯನ್ನು ಗುರುತಿಸಿರುವುದು ಪತ್ರಿಕಾ ವಲಯಕ್ಕೆ ಹೆಮ್ಮೆಯ ಸಂಗತಿಯಾಗಿದೆ.


73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮ ನವೆಂಬರ್ 20ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಹರೀಶ್ ರೈ ಅವರ ಈ ಗೌರವವು ಅವರ ವೈಯಕ್ತಿಕ ಸಾಧನೆಯಷ್ಟೇ ಅಲ್ಲದೆ, ಸಮರ್ಪಣಾ ಮನೋಭಾವದಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಸಮಸ್ತ ಪತ್ರಕರ್ತರಿಗೂ ಸಂದ ಗೌರವವಾಗಿದೆ. ಅವರ ಸಾಧನೆಗೆ ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.



