ಅಪಘಾತ ತಡೆಗೆ ತಕ್ಷಣ ಕ್ರಮ ಕೈಗೊಳ್ಳಿ; ಹೆದ್ದಾರಿಗಳಲ್ಲಿ ಸುರಕ್ಷತಾ ವ್ಯವಸ್ಥೆ ಬಲಪಡಿಸಿ – SP ಡಾ. ಅರುಣ್ ಕುಮಾರ್
ಮಂಗಳೂರು: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಪದೇಪದೇ ಸಂಭವಿಸುತ್ತಿರುವ ಅಪಘಾತಗಳಿಗೆ ಕಡಿವಾಣ ಹಾಕಲು ಅಗತ್ಯ ಸುರಕ್ಷತಾ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನವಂಬರ್ 18ರಂದು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಇಲಾಖೆ ರಸ್ತೆಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅಪಘಾತಗಳು ಮತ್ತು ಜೀವಹಾನಿ ಸಂಭವಿಸುತ್ತಿರುವ ಸ್ಥಳಗಳನ್ನು ಗುರುತಿಸಿ, ಅಲ್ಲಿ ತಕ್ಷಣವೇ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಅಪಘಾತ ಸಂಭವಿಸುವ ಸ್ಥಳಗಳಲ್ಲಿ ವಾಹನಗಳ ವೇಗ ನಿಯಂತ್ರಣ, ಟ್ರಾಫಿಕ್ ಸಿಗ್ನಲ್, ಎಚ್ಚರಿಕೆ ಹಾಗೂ ಸೂಚನಾ ಫಲಕಗಳ ಅಳವಡಿಕೆ ಸೇರಿದಂತೆ ಅಗತ್ಯ ಸಂಚಾರ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಕೇವಲ ತಾತ್ಕಾಲಿಕ ಪರಿಹಾರಕ್ಕೆ ಸೀಮಿತವಾಗದೆ, ಭವಿಷ್ಯದಲ್ಲಿ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಶಾಶ್ವತ ಸುರಕ್ಷತಾ ಕ್ರಮಗಳನ್ನೂ ಜಾರಿಗೊಳಿಸಬೇಕು ಎಂದು ಎಸ್ಪಿ ಸೂಚಿಸಿದರು.
ಹೆದ್ದಾರಿಗಳ ಹಲವು ಕಡೆ ರಾತ್ರಿ ವೇಳೆ ಸಮರ್ಪಕ ಬೀದಿ ದೀಪಗಳಿಲ್ಲದಿರುವುದು ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪ್ರಸ್ತುತ 42 ಪ್ರಮುಖ ಅಪಘಾತ ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೆದ್ದಾರಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಸೂಚನೆ:
ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರ ವಿರುದ್ಧದ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸುವಂತೆ ಎಸ್ಪಿ ಡಾ. ಅರುಣ್ ಕುಮಾರ್ ಪೊಲೀಸ್ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
2025-26ನೇ ಸಾಲಿನಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದವರ ವಿರುದ್ಧ ಜಿಲ್ಲೆಯಲ್ಲಿ 2,604 ಪ್ರಕರಣಗಳನ್ನು ದಾಖಲಿಸಲಾಗಿದೆ. ಟಿಂಟೆಡ್ ಗ್ಲಾಸ್ ಅಳವಡಿಸಿದ್ದ 33,703 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, 2025ರಲ್ಲಿ ₹73.89 ಲಕ್ಷ ಹಾಗೂ 2026ರಲ್ಲಿ ₹75.88 ಲಕ್ಷ ದಂಡ ವಸೂಲಿ ಮಾಡಲಾಗಿದೆ.
ಅತಿಯಾದ ಶಬ್ದದ ಹಾರ್ನ್ ಅಳವಡಿಸಿದ ವಾಹನಗಳ ವಿರುದ್ಧ 2,805 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪೈಕಿ 2025ರಲ್ಲಿ ₹7.44 ಲಕ್ಷ ಹಾಗೂ 2026ರಲ್ಲಿ ₹8.38 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಶಾಲಾ ವಾಹನಗಳಲ್ಲಿ ಮಿತಿಮೀರಿ ಮಕ್ಕಳನ್ನು ಸಾಗಿಸಿದ ಪ್ರಕರಣಗಳಿಗೆ ಸಂಬಂಧಿಸಿ 974 ಪ್ರಕರಣಗಳನ್ನು ದಾಖಲಿಸಲಾಗಿದೆ.

ಮೀನು ಸಾಗಾಟ ವಾಹನಗಳಿಂದ ತ್ಯಾಜ್ಯ ನೀರನ್ನು ರಸ್ತೆಗೆ ಚೆಲ್ಲುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 2026ರಲ್ಲಿ ಇಂತಹ ವಾಹನಗಳ ವಿರುದ್ಧ 535 ಪ್ರಕರಣಗಳನ್ನು ದಾಖಲಿಸಿ ₹2.65 ಲಕ್ಷ ದಂಡ ವಸೂಲಿ ಮಾಡಲಾಗಿದೆ.
ಇದಲ್ಲದೆ, ರಸ್ತೆ ಅಪಘಾತಗಳಿಂದ ಜೀವಹಾನಿ ಸಂಭವಿಸಿದ 279 ಪ್ರಕರಣಗಳಿಗೆ ಸಂಬಂಧಿಸಿ 538 ಚಾಲನಾ ಪರವಾನಗಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ರಸ್ತೆ ಸುರಕ್ಷತೆ ಪ್ರತಿಯೊಬ್ಬರ ಜೀವದೊಂದಿಗೆ ಸಂಬಂಧಿಸಿದ ಮಹತ್ವದ ವಿಚಾರವಾಗಿದ್ದು, ಅಪಘಾತ ತಡೆಗೆ ಸಂಬಂಧಪಟ್ಟ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ನಿರಂತರ ನಿಗಾ ವಹಿಸಿ, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಸ್ಪಿ ಡಾ. ಅರುಣ್ ಕುಮಾರ್ ಸೂಚಿಸಿದರು.
ಸಭೆಯಲ್ಲಿ DCP ರವಿಶಂಕರ್, ACP ನಜ್ಮಾ ಫಾರೂಕಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಘವೇಂದ್ರ ನಾಯಕ್, RTO ಅಧಿಕಾರಿ ಮುರಗೇಂದ್ರ ಬಿ. ಶಿರೋಳ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



