ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಹಕಾರ ವಿಭಾಗದ ಅಧ್ಯಕ್ಷರಾಗಿ ಸುದರ್ಶನ್ ಜೈನ್ ನೇಮಕ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಹಕಾರ ವಿಭಾಗದ ಅಧ್ಯಕ್ಷರಾಗಿ ಅನುಭವಿ ಸಹಕಾರಿ ಕ್ಷೇತ್ರದ ಮುಖಂಡ ಸುದರ್ಶನ್ ಜೈನ್ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಅನುಮೋದನೆ ಮೇರೆಗೆ ಈ ನೇಮಕಾತಿ ನಡೆದಿದ್ದು, ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ್ ಎಸ್. ತಾಳಂಪಳ್ಳಿ ಅವರು ಇಂದು ನವಂಬರ್ 19ರಂದು ಗುರುವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕಳೆದ 30 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಸುದರ್ಶನ್ ಜೈನ್ ಅವರು ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಹಾಗೂ ಆರು ವರ್ಷಗಳ ಕಾಲ ಪಂಜಿಕಲ್ಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಸುದೀರ್ಘ ಸಹಕಾರಿ ಕ್ಷೇತ್ರದ ಅನುಭವ ಹಾಗೂ ಸ್ಥಳೀಯ ಆಡಳಿತದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಲಾಗಿದೆ.



