November 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಬಿಡಿ ಸಿಗರೇಟ್ ಮಾರಾಟಕ್ಕೆ ಕಡಿವಾಣ – ಕಠಿಣ ಕ್ರಮಕ್ಕೆ ADC ಕೆ. ರಾಜು ಸೂಚನೆ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹಾಗೂ ಬಿಡಿಬಿಡಿಯಾಗಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ, ಹೋಟೆಲ್, ಕೆಫೆ ಮತ್ತು ಗೂಡಂಗಡಿಗಳ ವಿರುದ್ಧ ಜಂಟಿ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಕೆ. ರಾಜು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನವಂಬರ್ 20ರಂದು ಶುಕ್ರವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ (NTCP) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣಕ್ಕಾಗಿ ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದರೂ, ಸಾರ್ವಜನಿಕ ಸ್ಥಳಗಳಲ್ಲಿ ಬಿಡಿಬಿಡಿಯಾಗಿ ಸಿಗರೇಟ್ ಮಾರಾಟ ಮಾಡುವುದು ಹಾಗೂ ಹೋಟೆಲ್, ಕೆಫೆಗಳಲ್ಲಿ ಗ್ರಾಹಕರಿಗೆ ಧೂಮಪಾನಕ್ಕೆ ಅವಕಾಶ ನೀಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳು ಸಮನ್ವಯದಿಂದ ದಿಢೀರ್ ದಾಳಿ ನಡೆಸಬೇಕು ಎಂದು ಸೂಚಿಸಿದರು.

ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ (COTPA) ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಅಂಗಡಿಗಳ ವ್ಯಾಪಾರ ಪರವಾನಗಿಯನ್ನು ರದ್ದುಗೊಳಿಸುವ ಕ್ರಮವನ್ನೂ ಕೈಗೊಳ್ಳಬೇಕು ಎಂದು ಎಡಿಸಿ ನಿರ್ದೇಶನ ನೀಡಿದರು.

ಅಂಗಡಿ, ಹೋಟೆಲ್ ಪರವಾನಗಿಗೆ ಕಡ್ಡಾಯ ಷರತ್ತು:

ಗ್ರಾಮ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಹೊಸದಾಗಿ ಅಂಗಡಿ, ಹೋಟೆಲ್‌ಗಳಿಗೆ ವ್ಯಾಪಾರ ಪರವಾನಗಿ ನೀಡುವಾಗ ಮತ್ತು ನವೀಕರಿಸುವಾಗ, ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳನ್ನು ಬಿಡಿಬಿಡಿಯಾಗಿ ಮಾರಾಟ ಮಾಡುವಂತಿಲ್ಲ ಎಂಬ ಕಡ್ಡಾಯ ಷರತ್ತನ್ನು ವಿಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮಾ ಫಾರೂಕಿ ಮಾತನಾಡಿ, ಧೂಮಪಾನದಿಂದ ಯುವಜನತೆ ಮತ್ತು ವಿದ್ಯಾರ್ಥಿಗಳ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಅಪ್ರಾಪ್ತ ವಯಸ್ಕರಿಗೆ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಸಾಮಾಜಿಕ ಜಾಲತಾಣಗಳ ಪ್ರಭಾವ ಸೇರಿದಂತೆ ವಿವಿಧ ಕಾರಣಗಳಿಂದ ಹದಿಹರೆಯದವರು ಇಂತಹ ವ್ಯಸನಗಳಿಗೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.

ಶಾಲಾ-ಕಾಲೇಜುಗಳ 100 ಯಾರ್ಡ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸಿ ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಮಾತನಾಡಿ, ತಂಬಾಕು ಉತ್ಪನ್ನಗಳ ಅಕ್ರಮ ಮಾರಾಟ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನದ ವಿರುದ್ಧ ಜಿಲ್ಲಾ ತಂಬಾಕು ನಿಯಂತ್ರಣ ಸಮಿತಿಯು ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವುದರ ಜೊತೆಗೆ, ಅಂತಹ ಅಂಗಡಿಗಳ ಪರವಾನಗಿ ರದ್ದುಗೊಳಿಸಲು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್ ಮಾತನಾಡಿ, ಆಸ್ಪತ್ರೆಯ ಆವರಣದಲ್ಲಿ ಸಿಗರೇಟ್, ಗುಟ್ಕಾ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ತರುವುದು ಮತ್ತು ಧೂಮಪಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಪಾಲನೆಗಾಗಿ ಪ್ರತಿದಿನ ತಪಾಸಣೆ ನಡೆಸಲಾಗುತ್ತಿದ್ದು, ಉಲ್ಲಂಘಿಸಿದವರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ರಾಜು ಅವರು ‘ತಂಬಾಕು ಮುಕ್ತ ಯುವ ಅಭಿಯಾನ 4.0’ಕ್ಕೆ ಚಾಲನೆ ನೀಡಿದರು. 60 ದಿನಗಳ ಕಾಲ ನಡೆಯಲಿರುವ ಈ ಅಭಿಯಾನವನ್ನು ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ.

ಸಭೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

You may also like

News

ನವಂಬರ್ 25ರಂದು ದಕ್ಷಿಣ ಕನ್ನಡದಲ್ಲಿ ಬೃಹತ್ ರಕ್ತದಾನ ಅಭಿಯಾನ; 14 ರಕ್ತನಿಧಿ ಕೇಂದ್ರಗಳಲ್ಲಿ ಶಿಬಿರ – ಡಾ. ಎಚ್.ಆರ್. ತಿಮ್ಮಯ್ಯ

ಮಂಗಳೂರು: ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆಯಿಂದ ಯಾವುದೇ ಜೀವ ಅಪಾಯಕ್ಕೆ ಸಿಲುಕಬಾರದು ಎಂಬ ಮಾನವೀಯ ಆಶಯದೊಂದಿಗೆ ನವೆಂಬರ್ 25ರಂದು ರಾಜ್ಯಾದ್ಯಂತ ಬೃಹತ್ ರಕ್ತದಾನ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ
News

ಇತಿಹಾಸ ಪ್ರಸಿದ್ಧ ಅಜಿಲಮೊಗರು ಉರೂಸ್‌ಗೆ ಸಜ್ಜು

ಭಕ್ತರ ಅನುಕೂಲಕ್ಕೆ ಸೌಹಾರ್ದ ಸೇತುವೆಯಲ್ಲಿ ಪಾದಯಾತ್ರೆಗೆ ಅವಕಾಶ ಮಾಣಿ: ಹಝ್ರತ್ ಬಾಬಾ ಫಕ್ರುದ್ದೀನ್ ಔಲಿಯಾ (ರ) ಅವರ ಸ್ಮರಣಾರ್ಥ ಆಚರಿಸಿಕೊಂಡು ಬರುವ ಇತಿಹಾಸ ಪ್ರಸಿದ್ಧ ಅಜಿಲಮೊಗರು ಮಾಲಿದಾ

You cannot copy content of this page