ಶಿರೂರು ಅಪಘಾತಕ್ಕೆ ಇಬ್ಬರು ಯುವಕರು ಬಲಿ
ಬೈಂದೂರು ತಾಲೂಕಿನ ಶಿರೂರಿನ ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪ ನವಂಬರ್ 23ರಂದು ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಪ್ಪುಂದದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಉಪ್ಪುಂದ ಜನತಾ ಕಾಲೊನಿಯ 23 ವರ್ಷ ಪ್ರಾಯದ ಅಭಿಷೇಕ ಖಾರ್ವಿ ಮತ್ತು 23 ವರ್ಷ ಪ್ರಾಯದ ಪ್ರವೀಣ ಖಾರ್ವಿ ಎಂದು ಗುರುತಿಸಲಾಗಿದೆ.

ಉಪ್ಪುಂದದ ಕೊಡಿ ಹಬ್ಬದ ಹಿನ್ನೆಲೆಯಲ್ಲಿ ಇಬ್ಬರೂ ಯುವಕರು ಊರಿಗೆ ಆಗಮಿಸಿದ್ದರು. ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಗಳಿಗೆ ಈ ದುರಂತ ಸುದ್ದಿ ಬರಸಿಡಿಲಿನಂತೆ ಎರಗಿದೆ. ಪ್ರವೀಣ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರೆ, ಅಭಿಷೇಕ ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸೇರಿದ ಈ ಯುವಕರು ಮನೆಯ ಆಧಾರವಾಗಿದ್ದರು. ಅವರ ಅಕಾಲಿಕ ಅಗಲಿಕೆಯಿಂದ ಕುಟುಂಬಸ್ಥರು ತೀವ್ರ ಆಘಾತ ಮತ್ತು ದುಃಖಕ್ಕೆ ಒಳಗಾಗಿದ್ದಾರೆ.

ಸೋಮವಾರ ರಾತ್ರಿ ಇಬ್ಬರೂ ಉಪ್ಪುಂದದಿಂದ ಶಿರೂರು ಟೋಲ್ಗೇಟ್ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಶಿರೂರಿನ ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗಳಾಗಿವೆ. ತೀವ್ರ ರಕ್ತಸ್ರಾವದಿಂದಾಗಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದು ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
ಕೊಡಿ ಹಬ್ಬದ ಸಂಭ್ರಮದ ನಡುವೆ ಸಂಭವಿಸಿದ ಈ ದುರಂತ ಸಾವು ಉಪ್ಪುಂದ ಪರಿಸರದಲ್ಲಿ ಶೋಕದ ಛಾಯೆ ಮೂಡಿಸಿದೆ.



