ರಕ್ತದಾನ ಅತ್ಯಂತ ಪುಣ್ಯದ ಕಾರ್ಯ – ಡಾ. ದುರ್ಗಾ ಪ್ರಸಾದ್
ರಕ್ತದಾನ ಅತ್ಯಂತ ಪುಣ್ಯದ ಕಾರ್ಯವಾಗಿದ್ದು, ತುರ್ತು ಸಂದರ್ಭಗಳಲ್ಲಿ ಅನೇಕ ಜೀವಗಳನ್ನು ಉಳಿಸಲು ಸಹಕಾರಿಯಾಗುತ್ತದೆ. ಈ ಕುರಿತು ಯುವಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾ ಪ್ರಸಾದ್ ಹೇಳಿದರು.




ಸರ್ಕಾರಿ ಲೇಡಿಗೋಶನ್ ಆಸ್ಪತ್ರೆ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಸೋಮವಾರ ಲೇಡಿಗೋಶನ್ ಆಸ್ಪತ್ರೆಯಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಬಿರವನ್ನು ಉದ್ಘಾಟಿಸಿದ ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಮಾತನಾಡಿ, “ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭಗಳಲ್ಲಿ ಅಗತ್ಯವಿರುವ ರಕ್ತವನ್ನು ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ಮೂಲಕ ಸಂಪೂರ್ಣ ಉಚಿತವಾಗಿ ಪೂರೈಸಲಾಗುತ್ತಿದೆ. ಆಸ್ಪತ್ರೆಯ ಸಿಬ್ಬಂದಿಯೇ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ” ಎಂದರು. ಕಾರ್ಯಕ್ರಮದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ರೆಡ್‌ಕ್ರಾಸ್ ಜಿಲ್ಲಾ ಘಟಕದ ನಿರ್ದೇಶಕ ಗುರುದತ್ ಕಾಮತ್, ಲೇಡಿಗೋಶನ್ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ಜಗದೀಶ್, ಕೆಎಂಸಿ ಆಸ್ಪತ್ರೆಯ ಡಾ. ಅನುಪಮ ಸುರೇಶ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಶುಶ್ರೂಷಕ ಅಧೀಕ್ಷಕಿ ತ್ರೇಸಿಯಮ್ಮ, ಸಹಾಯಕ ಆಡಳಿತಾಧಿಕಾರಿ ಅನಿತಾ ಸತ್ಯನ್, ಕಚೇರಿ ಅಧೀಕ್ಷಕ ಶಂಕರ್, ಮೇಲ್ವಿಚಾರಕಿ ಮಲ್ಲಿಕಾ ಉಪಸ್ಥಿತರಿದ್ದರು. ಶುಶ್ರೂಷಕ ಅಧಿಕಾರಿ ಡಿನ್ಸಿಮೊನ್ ಸ್ವಾಗತಿಸಿದರು, ಹರಿಣಾಕ್ಷಿ ವಂದಿಸಿದರು, ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು.




