ಕೊನೆಯ ಪೆಡ್ಲರ್ ಬಂಧನವಾಗುವವರೆಗೂ ಡ್ರಗ್ಸ್ ಮುಕ್ತ ಕಾರ್ಯಾಚರಣೆ ಮುಂದುವರಿಕೆ – ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ
ಡ್ರಗ್ಸ್, ಗಾಂಜಾ ಸೇರಿದಂತೆ ಎಲ್ಲಾ ಮಾದಕ ವಸ್ತುಗಳ ಪೆಡ್ಲರ್‌ಗಳ ವಿರುದ್ಧ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಿ, ಕೊನೆಯ ಪೆಡ್ಲರ್ ಬಂಧನವಾಗುವವರೆಗೂ ಡ್ರಗ್ಸ್ ಮುಕ್ತ ಅಭಿಯಾನವನ್ನು ನಿರಂತರವಾಗಿ ಮುಂದುವರಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ. ಅವರು ನಗರದ ಪುರಭವನದಲ್ಲಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ಜಾಗೃತಿ ಹಿನ್ನೆಲೆಯಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿ ಡ್ರಗ್ಸ್ ವಿತರಣಾ ಜಾಲವನ್ನು ಸಂಪೂರ್ಣವಾಗಿ ನಿಲ್ಲಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದರು. ಇತ್ತೀಚೆಗೆ ವಿವಿಧ ಕಾಲೇಜುಗಳಲ್ಲಿ ನಡೆಸಿದ ವಿದ್ಯಾರ್ಥಿಗಳ ಡ್ರಗ್ಸ್ ತಪಾಸಣೆಯಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ಇದರಿಂದ ನಶಾಮುಕ್ತ ಮಂಗಳೂರು ಅಭಿಯಾನ ಸಂಪೂರ್ಣ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಎಲ್ಲಾ ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿಗಳನ್ನು ಕ್ರಿಯಾಶೀಲಗೊಳಿಸುವಂತೆ ಸೂಚಿಸಿದ ಅವರು, ಮಾದಕ ವಸ್ತುಗಳ ಪ್ರಭಾವಕ್ಕೆ ಒಳಗಾದ ಸಂಶಯಾಸ್ಪದ ವಿದ್ಯಾರ್ಥಿಗಳನ್ನು ಗುರುತಿಸಿ ಕೌನ್ಸೆಲಿಂಗ್ ಮೂಲಕ ಸಮಾಜದ ಮುಖ್ಯವಾಹಿನಿಗೆ ಕರೆತರುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಈ ಕಾರ್ಯದಲ್ಲಿ ಪೊಲೀಸ್ ಇಲಾಖೆ ಅಗತ್ಯ ನೆರವು ನೀಡಲಿದೆ ಎಂದರು. ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ಗಳನ್ನು ಮಾದಕ ವಸ್ತುಗಳಂತಹ ದುಷ್ಚಟಗಳಿಂದ ಮುಕ್ತಗೊಳಿಸುವ ಈ ಅಭಿಯಾನದಲ್ಲಿ ಕಾಲೇಜುಗಳು ಸಂಪೂರ್ಣವಾಗಿ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಕಾಲಕಾಲಕ್ಕೆ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ. ಡ್ರಗ್ಸ್ ಸೇವನೆಗೆ ಒಳಗಾದ ವಿದ್ಯಾರ್ಥಿಗಳನ್ನು ಸಂತ್ರಸ್ತರೆಂದು ಪರಿಗಣಿಸಲಾಗುವುದು. ಆದರೆ ಡ್ರಗ್ಸ್ ಪೆಡ್ಲರ್‌ಗಳ ವಿರುದ್ಧ ಯಾವುದೇ ರೀತಿಯ ದಯೆ ತೋರದೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ಮಂಗಳೂರಿನಲ್ಲಿ ಡ್ರಗ್ಸ್ ವ್ಯಾಪಕವಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದರೂ, 2025ರ ಜೂನ್ 1ರಿಂದ 2026ರ ಜನವರಿ 17ರವರೆಗೆ ವಿವಿಧ ಕಾಲೇಜುಗಳಲ್ಲಿ ಒಟ್ಟು 5,356 ಡ್ರಗ್ಸ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕೇವಲ 14 ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಇದು ಜಿಲ್ಲೆಯಲ್ಲಿ ಡ್ರಗ್ಸ್ ಚಟುವಟಿಕೆಗಳು ಗಣನೀಯವಾಗಿ ಕಡಿಮೆಯಾಗಿರುವುದನ್ನು ಸೂಚಿಸುತ್ತದೆ ಎಂದು ಕಮಿಷನರ್ ವಿವರಿಸಿದರು. ಜೊತೆಗೆ ಪಾಲಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಬೇಕೆಂದು ಸಲಹೆ ನೀಡಿದರು.


ಪಿಜಿಗಳಿಗೆ ಪೊಲೀಸ್ ಎನ್‌ಒಸಿ:
ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ)ಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಹಿನ್ನೆಲೆಯಲ್ಲಿ, ಪಿಜಿಗಳಿಗೆ ಲೈಸೆನ್ಸ್ ನೀಡುವ ಮೊದಲು ಪೊಲೀಸ್ ಇಲಾಖೆಯಿಂದ ನಿರಾಪೇಕ್ಷಣಾ ಪತ್ರ (ಎನ್‌ಒಸಿ) ಪಡೆಯುವ ವ್ಯವಸ್ಥೆ ಜಾರಿಗೆ ತರುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದರು. ಸಭೆಯಲ್ಲಿ ಭಾಗವಹಿಸಿದ ಸಭಿಕರು, ಅನೇಕ ಪಿಜಿಗಳಲ್ಲಿ ನಿಯಮಗಳ ಪಾಲನೆ ಆಗದೆ ಡ್ರಗ್ಸ್ ಸೇವನೆಗೆ ಪೂರಕ ವಾತಾವರಣ ನಿರ್ಮಾಣವಾಗುತ್ತಿದೆ ಹಾಗೂ ಪಿಜಿಗಳ ಕಾರ್ಯಾಚರಣೆ ಕುರಿತು ಪೊಲೀಸರಿಗೆ ಸೂಕ್ತ ಮಾಹಿತಿ ಇಲ್ಲ ಎಂದು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತರು, ನಗರ ಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳು ಪಿಜಿ ಲೈಸೆನ್ಸ್ ನೀಡುವ ಮೊದಲು ಪೊಲೀಸ್ ಎನ್‌ಒಸಿ ಕಡ್ಡಾಯಗೊಳಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಪೊಲೀಸ್ ಅಧೀಕ್ಷಕರಾದ ಅರುಣ್ ಕುಮಾರ್, ಉಪ ಪೊಲೀಸ್ ಆಯುಕ್ತರಾದ ಮಿಥುನ್ ಹೆಚ್. ಎನ್., ಮಂಗಳೂರು ಉಪ ವಿಭಾಗಾಧಿಕಾರಿಯವರಾದ ಮೀನಾಕ್ಷಿ ಆರ್ಯ, ಎಎಸ್‌ಪಿ ಅನಿಲ್ ಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.




