July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ.

ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿ, ಹೋಟೆಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದ್ದಾರೆ. ಅವರು ಇಂದು ಫೆಬ್ರವರಿ 2ರಂದು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಶರತ್ತನ್ನು ವಿಧಿಸಬೇಕು. ಈ ಕುರಿತು ನಿಯಮಿತವಾಗಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ವಿವಿಧ ಸೂಚನಾ ಫಲಕಗಳಲ್ಲಿ ಕನ್ನಡದಲ್ಲಿ ಮಾಹಿತಿ ಪ್ರದರ್ಶಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗುವುದು. ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿಯೂ ಒದಗಿಸುವಂತೆ ಬ್ಯಾಂಕುಗಳ ಸಮಿತಿ ಸಭೆಯಲ್ಲಿ ನಿರ್ದೇಶನ ನೀಡಲಾಗುವುದು ಎಂದು ಅವರು ತಿಳಿಸಿದರು. ಇಂಗ್ಲಿಷ್ ಮಾಧ್ಯಮ ಶಾಲೆ ಹಾಗೂ ಕಾಲೇಜುಗಳಲ್ಲಿ ಪಾಠ ಬೋಧನೆ ಇಂಗ್ಲಿಷ್‌ನಲ್ಲಿ ನಡೆಯುತ್ತಿದ್ದರೂ, ಶಿಕ್ಷಣ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡದಲ್ಲಿಯೂ ಹೆಸರು ಬರೆಯುವುದು ಕಡ್ಡಾಯವಾಗಿರಬೇಕು. ಖಾಸಗಿ ಬಸ್‌ಗಳ ಬೋರ್ಡುಗಳಲ್ಲಿ ಊರಿನ ಹೆಸರುಗಳನ್ನು ಕನ್ನಡದಲ್ಲಿ ಬರೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ನಗರದ ಮಾಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸುವಂತೆ ಮಹಾನಗರಪಾಲಿಕೆಗೆ ಸೂಚಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕರ ಕೊರತೆಯಿಂದ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿರುವ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು. ಕೆಲ ಉದ್ಯಮಗಳಲ್ಲಿ ಹೊರರಾಜ್ಯದ ಕಾರ್ಮಿಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸ್ಥಳೀಯರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಗಮನಸೆಳೆದರು. ರಾಷ್ಟ್ರೀಕೃತ ಬ್ಯಾಂಕುಗಳು ಠೇವಣಿ ಹಾಗೂ ಹಣ ಹಿಂಪಡೆಯುವಿಕೆ ಸ್ಲಿಪ್‌ಗಳನ್ನು ಕನ್ನಡದಲ್ಲಿಯೂ ಒದಗಿಸಬೇಕು. ಗ್ರಾಮೀಣ ಬ್ಯಾಂಕುಗಳಲ್ಲಿ ಕನ್ನಡ ಜ್ಞಾನವಿಲ್ಲದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವುದರಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಮಾತನಾಡಿ, ಮಂಗಳೂರು ನಗರದಲ್ಲಿ ಜಿಲ್ಲಾ ಮಟ್ಟದ ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡುವಂತೆ ಸಭೆಯಲ್ಲಿ ಆಗ್ರಹಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ., ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಡಾ. ಸಂತೋಷ್ ಕುಮಾರ್ ಜಿ., ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ., ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ದೇವಿಪ್ರಸಾದ್, ರಾಜಶೇಖರ್ ಅಜ್ರಿ, ರಾಜೇಶ್ ಡಿಸೋಜ, ದಿವಾಕರ್ ದಾಸ್, ಹಸೈನಾರ್ ತಾಳಿತ್ತನೂಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

You may also like

News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at
News

Father Muller Ushers in a New Era of Precision Orthopaedics with the Region’s First STRYKER–USA MAKO SmartRobotics™ System

Father Muller Medical College Hospital has once again reaffirmed its commitment to pioneering excellence in healthcare with the commissioning of

You cannot copy content of this page