August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ಮಾಜಿ ಕೇಂದ್ರೀಯ ಅಧ್ಯಕ್ಷ ಹಾಗೂ ಸಮಾಜಸೇವಕ ಸ್ಟ್ಯಾನಿ ಲೋಬೊ ಬಂಟ್ವಾಳ ವಿರುದ್ಧದ ಅಪಪ್ರಚಾರ ಖಂಡನೀಯ

ಸತ್ಯದ ಪರ ಸಮಾಜ ದೃಢವಾಗಿ ನಿಲ್ಲಬೇಕು – AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

ಮಂಗಳೂರು, ಜೂನ್ 27: ಸಮಾಜಸೇವೆ, ಧಾರ್ಮಿಕ ನಾಯಕತ್ವ ಹಾಗೂ ಉದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಮಾಜಿ ಕೇಂದ್ರೀಯ ಅಧ್ಯಕ್ಷ, ಹಿರಿಯ ಉದ್ಯಮಿ ಹಾಗೂ ಸಮಾಜಸೇವಕರಾದ ಸ್ಟ್ಯಾನಿ ಲೋಬೊ ಬಂಟ್ವಾಳ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದುರುದ್ದೇಶಪೂರಿತ ವ್ಯಕ್ತಿಗಳು ನಡೆಸುತ್ತಿರುವ ಸುಳ್ಳು ಹಾಗೂ ಆಧಾರರಹಿತ ಅಪಪ್ರಚಾರವನ್ನು ಅಖಿಲ ಭಾರತ ಕ್ರೈಸ್ತ ಒಕ್ಕೂಟ (AICU) ಕರ್ನಾಟಕ ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸ್ಟ್ಯಾನಿ ಲೋಬೊ ಬಂಟ್ವಾಳ ಅವರು ಕೇವಲ ಯಶಸ್ವಿ ಉದ್ಯಮಿಯಷ್ಟೇ ಅಲ್ಲ, ಸಮಾಜದ ಹಿತಾಸಕ್ತಿಗಾಗಿ ಸದಾ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿರುವ ಅಪರೂಪದ ವ್ಯಕ್ತಿತ್ವ ಎಂದು ಬಣ್ಣಿಸಿದ್ದಾರೆ.

ಬಂಟ್ವಾಳದ ವಗ್ಗ-ಮಂಚಿಕಲ್ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲಿನ ಕೋರೆ ಹಾಗೂ ಪಾವೂರು ಉಳಿಯ ದ್ವೀಪದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ ವಿರುದ್ಧ ಧೈರ್ಯವಾಗಿ ಧ್ವನಿ ಎತ್ತಿ, ಪರಿಸರ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಅವರು ವಹಿಸಿದ ಪಾತ್ರ ಜನಮೆಚ್ಚುಗೆಗೆ ಪಾತ್ರವಾಗಿತ್ತು. ಅದೇ ರೀತಿ, ಮಣಿಪುರದಲ್ಲಿ ಕ್ರೈಸ್ತ ಸಮುದಾಯದ ಮೇಲೆ ನಡೆದ ಹಲ್ಲೆ ಹಾಗೂ ಕರ್ನಾಟಕದಲ್ಲಿ ಮತಾಂತರ ವಿರೋಧಿ ಕಾಯ್ದೆ ವಿರುದ್ಧ ಸಾವಿರಾರು ಜನರನ್ನು ಒಗ್ಗೂಡಿಸಿ ಶಾಂತಿಯುತ ಪ್ರತಿಭಟನೆಗಳನ್ನು ಸಂಘಟಿಸುವ ಮೂಲಕ ಸಮಾಜದ ಹಕ್ಕುಗಳಿಗಾಗಿ ಅವರು ನಡೆಸಿದ ಹೋರಾಟ ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ ಎಂದು ಅವರು ತಿಳಿಸಿದ್ದಾರೆ.

ಉದ್ಯಮ ಕ್ಷೇತ್ರದಲ್ಲಿಯೂ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯನ್ನು ಮೈಗೂಡಿಸಿಕೊಂಡಿರುವ ಸ್ಟ್ಯಾನಿ ಲೋಬೊ ಅವರು ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿ ಉದ್ಯಮ ನಡೆಸಿ ಹಲವಾರು ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿದ್ದಾರೆ. ಸಮಾಜದಲ್ಲಿ ವಿಶ್ವಾಸಾರ್ಹ, ನಿಷ್ಠಾವಂತ ಹಾಗೂ ಜನಪರ ವ್ಯಕ್ತಿಯಾಗಿ ಅವರು ಅಪಾರ ಗೌರವವನ್ನು ಗಳಿಸಿಕೊಂಡಿದ್ದಾರೆ ಎಂದು ಆಲ್ವಿನ್ ಡಿಸೋಜ ಪಾನೀರ್ ಹೇಳಿದ್ದಾರೆ.

ಕೊವಿಡ್-19 ಮಹಾಮಾರಿ ಸಂದರ್ಭದಲ್ಲಿ ಧರ್ಮ, ಜಾತಿ, ಮತ ಎನ್ನುವ ಯಾವುದೇ ಭೇದಭಾವವಿಲ್ಲದೆ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲ ಸಮುದಾಯಗಳ ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಆಹಾರ ಸಾಮಗ್ರಿಗಳ ಕಿಟ್‌ಗಳನ್ನು ವಿತರಿಸುವ ಮೂಲಕ ಮಾನವೀಯ ಸೇವೆಯ ಮಾದರಿಯನ್ನು ಅವರು ತೋರಿಸಿದ್ದರು. ಸಂಕಷ್ಟದ ಸಮಯದಲ್ಲಿ ಅವರ ಸೇವೆ ಸಾವಿರಾರು ಕುಟುಂಬಗಳಿಗೆ ಆಸರೆಯಾಗಿತ್ತು ಎಂದು ಅವರು ಸ್ಮರಿಸಿದ್ದಾರೆ.

ಇದರೊಂದಿಗೆ, ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷರಾಗಿ ಸತತ ಎರಡು ಅವಧಿಗಳ ಕಾಲ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಅನೇಕ ಧಾರ್ಮಿಕ, ಸಾಮಾಜಿಕ ಹಾಗೂ ಸೇವಾ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ನಿಸ್ವಾರ್ಥ ಸೇವೆಯ ಮೂಲಕ ಜನಮನ್ನಣೆ ಗಳಿಸಿರುವ ವ್ಯಕ್ತಿಯಾಗಿದ್ದಾರೆ ಎಂದು ಅವರು ಪ್ರಶಂಸಿಸಿದ್ದಾರೆ.

ಇಂತಹ ಜನಪರ ಸೇವೆ ಸಲ್ಲಿಸುತ್ತಿರುವ ಹಿರಿಯ ನಾಯಕರ ತೇಜೋವಧೆ ಮಾಡುವ ಉದ್ದೇಶದಿಂದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಸುದ್ದಿ, ನಿರಾಧಾರ ಆರೋಪಗಳು ಹಾಗೂ ಅಪಪ್ರಚಾರವನ್ನು ಹರಡುತ್ತಿರುವುದು ಅತ್ಯಂತ ಖಂಡನೀಯ. ಇಂತಹ ಕೃತ್ಯಗಳು ವ್ಯಕ್ತಿಯ ಘನತೆಗೆ ಧಕ್ಕೆ ತರುವುದಲ್ಲದೆ ಸಮಾಜದಲ್ಲಿ ಗೊಂದಲ ಮತ್ತು ವೈಮನಸ್ಸು ಸೃಷ್ಟಿಸುವ ದುರುದ್ದೇಶವನ್ನು ಹೊಂದಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಯಾವುದೇ ಮಾಹಿತಿ ಅಥವಾ ಆರೋಪಗಳನ್ನು ಸತ್ಯಾಸತ್ಯತೆ ಪರಿಶೀಲಿಸದೆ ನಂಬಬಾರದು. ಸಮಾಜದ ಅಭಿವೃದ್ಧಿ, ನ್ಯಾಯ ಮತ್ತು ಜನಸೇವೆಗೆ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಸ್ಟ್ಯಾನಿ ಲೋಬೊ ಬಂಟ್ವಾಳ ಅವರಂತಹ ನಾಯಕರ ವಿರುದ್ಧ ನಡೆಯುತ್ತಿರುವ ಸುಳ್ಳು ಅಪಪ್ರಚಾರವನ್ನು ತಿರಸ್ಕರಿಸಿ, ಸತ್ಯ, ನ್ಯಾಯ ಹಾಗೂ ಪ್ರಾಮಾಣಿಕತೆಯ ಪರವಾಗಿ ಸಮಾಜ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು AICU ಕರ್ನಾಟಕ ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page