August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು ಬಕ್ರು ಅವರು ಭರವಸೆ ನೀಡಿದ್ದಾರೆ ಎಂದು ಹೈಕೋರ್ಟ್ ಕರಾವಳಿ ಸಂಚಾರಿ ಪೀಠ ಸ್ಥಾಪನೆ ಹೋರಾಟ ಸಮಿತಿಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಕರ್ನಾಟಕ ಸರ್ಕಾರ ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ಸಿದ್ಧವಿದೆ. ಈ ಹಿನ್ನೆಲೆಯಲ್ಲಿ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳಲ್ಲಿ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳು, ಜಿಲ್ಲೆಗಳ ನಡುವಿನ ಚರ್ಚೆಗಳು ಹಾಗೂ ಎದುರಾಗಿರುವ ಅಡೆತಡೆಗಳ ಕುರಿತು ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಮುಖ್ಯ ನ್ಯಾಯಮೂರ್ತಿಗಳನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿತು.

ಈ ಸಂದರ್ಭದಲ್ಲಿ ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠದ ಅಗತ್ಯತೆಯ ಬಗ್ಗೆ ತಮಗೆ ಅರಿವಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದರು. ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದ ವಾಸ್ತವಾಂಶಗಳು, ವಿವಿಧ ಜಿಲ್ಲೆಗಳ ಅಭಿಪ್ರಾಯಗಳು ಹಾಗೂ ಇತರ ವಿಚಾರಗಳನ್ನು ಸಮಗ್ರವಾಗಿ ಪರಿಶೀಲಿಸಲು ಸಮಿತಿ ರಚಿಸುವಂತೆ ನಿಯೋಗ ಮಾಡಿದ್ದ ಮನವಿಯನ್ನು ಅವರು ಪರಿಗಣಿಸುವುದಾಗಿ ತಿಳಿಸಿದರು. ಸಮಿತಿಯ ಮೂಲಕ ವಾಸ್ತವಾಂಶಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಕರಾವಳಿ ಭಾಗದ ನಾಗರಿಕರಿಗೆ ನ್ಯಾಯವನ್ನು ತ್ವರಿತವಾಗಿ ಹಾಗೂ ಸುಲಭವಾಗಿ ದೊರಕಿಸುವ ನಿಟ್ಟಿನಲ್ಲಿ ಹೈಕೋರ್ಟ್ ಸಂಚಾರಿ ಪೀಠದ ಅಗತ್ಯತೆಯ ಕುರಿತು ನಿಯೋಗವು ವಿವರವಾಗಿ ಮನವರಿಕೆ ಮಾಡಿತು. ಈ ಸಂದರ್ಭದಲ್ಲಿ ನಾಗರಿಕರ ಮನೆಬಾಗಿಲಿಗೆ ನ್ಯಾಯವನ್ನು ತಲುಪಿಸುವ ಅಗತ್ಯವನ್ನು ಒತ್ತಿಹೇಳಿರುವ ಇತ್ತೀಚಿನ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ, ಕರಾವಳಿ ಭಾಗದಲ್ಲಿ ಸರ್ಕ್ಯೂಟ್ ಪೀಠ ಸ್ಥಾಪನೆಯ ಅಗತ್ಯತೆಯನ್ನೂ ಎಂ.ಪಿ. ನೊರೊನ್ಹಾ ಅವರು ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ತಂದರು.

ನಿಯೋಗದಲ್ಲಿ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಶೇಣವ, ಉಡುಪಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ರೊನಾಲ್ಡ್ ಪ್ರವೀಣ್, ಮಾಜಿ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ರಾಘವೇಂದ್ರ ರಾವ್, ಪ್ರಧಾನ ಜಿಲ್ಲಾ ಸರ್ಕಾರಿ ವಕೀಲರು ಹಾಗೂ ಕರಾವಳಿ ಹೈಕೋರ್ಟ್ ಪೀಠ ಸಮಿತಿಯ PRO ಎಂ.ಪಿ. ನೊರೊನ್ಹಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

 

ಮಂಗಳೂರಿನಲ್ಲಿ ಪೀಠ ಸ್ಥಾಪನೆಗೆ ವ್ಯಾಪಕ ಬೆಂಬಲ:

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಬೇಕೆಂಬ ಬೇಡಿಕೆಗೆ ಕರಾವಳಿ ಭಾಗದ ಬಾರ್ ಅಸೋಸಿಯೇಷನ್‌ಗಳ ಸದಸ್ಯರು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಕರ್ನಾಟಕ ಸರ್ಕಾರವೂ ಮಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುವ ಸಂದರ್ಭದಲ್ಲಿ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಯೊಂದಿಗೆ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯ ವಿಚಾರವೂ ಪ್ರಮುಖವಾಗಿ ಚರ್ಚೆಯಾಗಲಿದೆ. ಪೀಠ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು MLC ಐವನ್ ಡಿಸೋಜ ತಿಳಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿಗಳು ಸೆಪ್ಟೆಂಬರ್‌ನಲ್ಲಿ ಮತ್ತೊಮ್ಮೆ ಭೇಟಿ ನೀಡಿ ಈ ಕುರಿತು ವಿಚಾರ ವಿನಿಮಯ ನಡೆಸುವುದಾಗಿ ತಿಳಿಸಿರುವುದು ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ಆಶಾದಾಯಕ ಬೆಳವಣಿಗೆಯಾಗಿದೆ ಎಂದು MLC ಐವನ್ ಡಿಸೋಜ ಅಭಿಪ್ರಾಯಪಟ್ಟರು.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

CODP ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕತ್ವಕ್ಕೆ ತರಬೇತಿ

ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ನಾಯಕತ್ವವನ್ನು ಬಲಪಡಿಸುವ ಉದ್ದೇಶದಿಂದ ಸಿಓಡಿಪಿ ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣ ಯೋಜನೆಯಡಿ “ಸ್ಥಳೀಯ ಆಡಳಿತದಲ್ಲಿ ನಾಯಕತ್ವ”

You cannot copy content of this page