ಸೆಪ್ಟೆಂಬರ್ 19ರಂದು ರಾಷ್ಟ್ರೀಯ ಲೋಕ ಅದಾಲತ್ – 8,515 ಪ್ರಕರಣಗಳ ಇತ್ಯರ್ಥಕ್ಕೆ ಸಿದ್ಧತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ಹಾಗೂ ಸದಸ್ಯ ಕಾರ್ಯದರ್ಶಿಯವರಾದ ಜೈಬುನ್ನೀಸಾ ಅವರು ತಿಳಿಸಿದ್ದಾರೆ.

2026 ಆಗಸ್ಟ್ 1ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 56,727 ಪ್ರಕರಣಗಳು ಬಾಕಿ ಇದ್ದು, ಅವುಗಳಲ್ಲಿ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲು ಯೋಗ್ಯವಾಗಿರುವ 8,515 ಪ್ರಕರಣಗಳನ್ನು ಗುರುತಿಸಲಾಗಿದೆ. ಈ ಪೈಕಿ 3,264 ಪ್ರಕರಣಗಳನ್ನು ಲೋಕ ಅದಾಲತ್‌ಗೆ ಉಲ್ಲೇಖಿಸಲಾಗಿದೆ. ಈಗಾಗಲೇ ರಾಜಿ ಸಂಧಾನಗೊಂಡು ಇತ್ಯರ್ಥಕ್ಕೆ ಸಿದ್ಧವಾಗಿರುವ 232 ಪ್ರಕರಣಗಳು ಹಾಗೂ ಈಗಾಗಲೇ ವಿಲೇವಾರಿಯಾಗಿರುವ 12 ಪ್ರಕರಣಗಳು ದಾಖಲಾಗಿವೆ.

ಕಳೆದ ಜುಲೈ 11ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 2,665 ಬಾಕಿ ಪ್ರಕರಣಗಳು ಇತ್ಯರ್ಥಗೊಂಡಿದ್ದು, 3,02,239 ಪೂರ್ವವಿಚಾರಣಾ (PLC) ಪ್ರಕರಣಗಳು ವಿಲೇವಾರಿಯಾಗಿದ್ದವು.
ಇದೇ ವೇಳೆ ಮೆಡಿಯೇಷನ್ ಡ್ರೈವ್ 3.0 ಅಡಿಯಲ್ಲಿ ಜಿಲ್ಲೆಯಲ್ಲಿ 980 ಬಾಕಿ ಪ್ರಕರಣಗಳನ್ನು ಮಧ್ಯಸ್ಥಿಕೆಗೆ ಗುರುತಿಸಲಾಗಿದ್ದು, 452 ಪ್ರಕರಣಗಳನ್ನು ಮಧ್ಯಸ್ಥಿಕೆಗೆ ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸಬಹುದಾದ ವಿವಿಧ ಸಿವಿಲ್, ಕ್ರಿಮಿನಲ್, ಮೋಟಾರು ವಾಹನ ಅಪಘಾತ ಪರಿಹಾರ, ಕುಟುಂಬ ವಿವಾದ, ಚೆಕ್ ಬೌನ್ಸ್ ಸೇರಿದಂತೆ ಅರ್ಹ ಪ್ರಕರಣಗಳನ್ನು ಇತ್ಯರ್ಥಪಡಿಸಲು ಅವಕಾಶವಿದೆ. ಸಾರ್ವಜನಿಕರು ಹಾಗೂ ಸಂಬಂಧಪಟ್ಟ ಪ್ರಕರಣಗಳ ಪಕ್ಷಗಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮನವಿ ಮಾಡಿದೆ.

ಲೋಕ ಅದಾಲತ್ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಹಾಗೂ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಅವಕಾಶವಿದ್ದು, ಹೆಚ್ಚಿನ ಸಂಖ್ಯೆಯ ಪ್ರಕರಣಗಳ ಇತ್ಯರ್ಥಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ನ್ಯಾಯಾದೀಶರಾದ ಬಸವರಾಜ ಅವರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಯವರಾದ ಜೈಬುನ್ನೀಸಾ ಅವರು ರಾಷ್ಟ್ರೀಯ ಲೋಕ ಅದಾಲತ್‌ನ ಸದುಪಯೋಗ ಪಡೆಯುವಂತೆ ಸಾರ್ವಜನಿಕರಿಗೆ ತಿಳಿಸಿದ್ದಾರೆ.



