BPL ಕುಟುಂಬಗಳಿಗೆ ಉಚಿತ ರಕ್ತ: ಮುಂದಿನ ವರ್ಷದಿಂದ ಯೋಜನೆ ಜಾರಿ – ಸಿಎ ಶಾಂತಾರಾಮ ಶೆಟ್ಟಿ
ಜಿಲ್ಲೆಯ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ BPL ಕಾರ್ಡ್‌ದಾರರಿಗೆ ಉಚಿತವಾಗಿ ರಕ್ತ ಪೂರೈಸುವ ಯೋಜನೆಯನ್ನು ಮುಂದಿನ ವರ್ಷದಿಂದ ಜಾರಿಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿ ಸಿದ್ಧತೆ ನಡೆಸಿದೆ ಎಂದು ಸೊಸೈಟಿಯ ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ತಿಳಿಸಿದರು. ನಗರದ ಮಣ್ಣಗುಡ್ಡೆ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 20ರಂದು ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ವತಿಯಿಂದ ರೆಡ್‌ಕ್ರಾಸ್ ಸೊಸೈಟಿಯ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ವೈದ್ಯಕೀಯ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಲೇಡಿಗೋಶನ್ ಆಸ್ಪತ್ರೆಯಲ್ಲಿ ದಾಖಲಾಗುವ ಗರ್ಭಿಣಿಯರು ಸೇರಿದಂತೆ ಅಗತ್ಯವಿರುವ ರೋಗಿಗಳಿಗೆ ಈಗಾಗಲೇ ರೆಡ್‌ಕ್ರಾಸ್ ಬ್ಲಡ್‌ಬ್ಯಾಂಕ್‌ನಿಂದ ಉಚಿತವಾಗಿ ರಕ್ತ ಪೂರೈಸಲಾಗುತ್ತಿದೆ. ಇದೇ ಮಾದರಿಯಲ್ಲಿ ಜಿಲ್ಲೆಯಾದ್ಯಂತ ಬಿಪಿಎಲ್ ಕಾರ್ಡ್‌ದಾರರಿಗೆ ನೆರವಾಗುವ ಉದ್ದೇಶದಿಂದ ಹೊಸ ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರಾದ ರಾಮ್‌ಪ್ರಸಾದ್ ಅವರು ವಹಿಸಿದ್ದರು. ರೆಡ್‌ಕ್ರಾಸ್ ಸೊಸೈಟಿ ನಿರ್ದೇಶಕ ರಾಘವೇಂದ್ರ ರಾವ್ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಣ್ಣಗುಡ್ಡೆ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಕೆಎಂಸಿ ಆಸ್ಪತ್ರೆಯ ಡಾ. ಕಿಶನ್ ಪ್ರೇಮ್ ಹಾಗೂ ಡಾ. ಸಾಹಿಸ್ತಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಯೆಯ್ಯಾಡಿ, ಕೋಶಾಧಿಕಾರಿ ಸತೀಶ್ ಪೂಜಾರಿ ಉರ್ವ, ಸ್ಥಾಪಕ ಅಧ್ಯಕ್ಷ ಮೋಹನ್ ಅತ್ತಾವರ, ಲೋಕೇಶ್ ಸುರತ್ಕಲ್, ದಿನೇಶ್ ಕುಂಜತ್ತಬೈಲ್, ಕಿರಣ್ ಲೇಡಿಹಿಲ್ ಹಾಗೂ ರಾಜೇಶ್ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಸತೀಶ್ ಪೂಜಾರಿ ಅಶೋಕನಗರ ಸ್ವಾಗತಿಸಿದರು. ಆಂತರಿಕ ಲೆಕ್ಕಪರಿಶೋಧಕ ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿದರು.

ಕೆಎಂಸಿ ಆಸ್ಪತ್ರೆ, ಪ್ರಸಾದ್ ನೇತ್ರಾಲಯ, ಶ್ರೀನಿವಾಸ್ ಹಾಸ್ಪಿಟಲ್ ಮುಕ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಸಹಭಾಗಿತ್ವದಲ್ಲಿ ವೈದ್ಯಕೀಯ ಹಾಗೂ ರಕ್ತದಾನ ಶಿಬಿರ ನಡೆಯಿತು.



