October 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಕಾಂಗ್ರೆಸ್ ಸಜ್ಜು, ಬ್ಲಾಕ್–ಬೂತ್ ಮಟ್ಟದಲ್ಲಿ ಸಂಘಟನೆ ಬಲಪಡಿಸಿ – ಸಚಿವ ಯು.ಟಿ. ಖಾದರ್

2028ರ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದ 8 ಕ್ಷೇತ್ರಗಳತ್ತ ಗಮನ

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಬ್ಲಾಕ್ ಹಾಗೂ ಬೂತ್ ಮಟ್ಟದಿಂದಲೇ ಮತ್ತಷ್ಟು ಬಲಪಡಿಸಿ ಚುನಾವಣೆಗೆ ಸಜ್ಜಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಕರೆ ನೀಡಿದರು.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಅಕ್ಟೋಬರ್ 3ರಂದು ಶನಿವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಸಾಮಾನ್ಯ ಸಭೆಯಲ್ಲಿ ಮುಖಂಡರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್‌ನ ಮುಂಚೂಣಿ ಘಟಕಗಳಾದ ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಸೇವಾದಳ ಹಾಗೂ ಎನ್‌ಎಸ್‌ಯುಐ ವತಿಯಿಂದ ಪ್ರತ್ಯೇಕ ಜಿಲ್ಲಾ ಮಟ್ಟದ ಸಮಾವೇಶಗಳನ್ನು ಆಯೋಜಿಸಿ, ಅವುಗಳ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸಬೇಕು ಎಂದು ಖಾದರ್ ಸೂಚಿಸಿದರು. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸಿ 2028ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಮತದಾರರ ಅಂತಿಮ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಯಾವುದೇ ಕಾರಣಕ್ಕೂ ಕೈತಪ್ಪದಂತೆ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಕಡ್ಡಾಯವಾಗಿ ಮತದಾರರ ಪಟ್ಟಿಯನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ನಡೆದ ಸಚಿವ ಸಂಪುಟದ ನಿರ್ಣಯಗಳನ್ನು ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದ ಖಾದರ್, ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಉದ್ದೇಶದಿಂದ ತಿಂಗಳಿಗೆ ಎರಡು ಬಾರಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಸಂಘಟನೆ ಬಲಪಡಿಸಲು ಅಗತ್ಯ ಸಿದ್ಧತೆ – ಪದ್ಮರಾಜ್ ಪೂಜಾರಿ

ಸಭೆಯ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸಿ ಕಾರ್ಯಕರ್ತರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಮುಂಬರುವ ಚುನಾವಣೆಗಳನ್ನು ಎದುರಿಸಲು ಅಗತ್ಯ ಸಿದ್ಧತೆ ನಡೆಸಲಾಗುವುದು ಎಂದು ಹೇಳಿದರು.

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದು ಹಾಗೂ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯನ್ನಾಗಿಸಲು ತೀರ್ಮಾನ ಕೈಗೊಂಡಿರುವುದನ್ನು ಸಭೆಯಲ್ಲಿ ಅಭಿನಂದಿಸಲಾಯಿತು.

ಜಿಲ್ಲೆಯಲ್ಲಿ ಖಾಲಿಯಿರುವ ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರನ್ನು ಶೀಘ್ರದಲ್ಲಿ ನಾಮನಿರ್ದೇಶನಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನೂ ಸಭೆಯಲ್ಲಿ ಕೈಗೊಳ್ಳಲಾಯಿತು.

ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್. ಲೋಬೊ, ಜಿಲ್ಲಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಮಿಥುನ್ ರೈ, ರಕ್ಷಿತ್ ಶಿವರಾಂ, ಎಂ.ಎಸ್. ಮಹಮ್ಮದ್, ಸೃಜನ್ ಸಂಘನ್, ಜಿಲ್ಲಾ ವೀಕ್ಷಕರಾದ ಡಾ. ಅಂಶುಮ್ನಾಥ್, ಸತೀಶ್, ಸದಾಶಿವ, ಮೂಡ ಅಧ್ಯಕ್ಷ ಸಂತೋಷ್ ಶೆಟ್ಟಿ ಸೇರಿದಂತೆ ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಕೆಪಿಸಿಸಿ ಸದಸ್ಯರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಮಂಗಳೂರು ಮಹಾನಗರ ಪಾಲಿಕೆಯ ವಿಜೇತ ಹಾಗೂ ಪರಾಜಿತ ಅಭ್ಯರ್ಥಿಗಳು ಮತ್ತು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಘಟಕಗಳ ಮುಖಂಡರ ಸಭೆ ನಡೆಯಿತು.

You may also like

News

ದಯಾ ವಿಶೇಷ ಮಕ್ಕಳ ಶಾಲೆಗೆ ಕಥೊಲಿಕ್ ಸಭಾ ಬೆಳ್ತಂಗಡಿ ವಲಯದಿಂದ ₹2.30 ಲಕ್ಷ ನೆರವು – ಕೃತಜ್ಞತೆ ಸಲ್ಲಿಸಿದ ಫಾದರ್ ವಾಲ್ಟರ್ ಡಿಮೆಲ್ಲೊ

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಬೆಳ್ತಂಗಡಿ ವಲಯ ಇದರ ಆದ್ಯಾತ್ಮಿಕ ನಿರ್ದೇಶಕರು, ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಬೆಳ್ತಂಗಡಿಯ ದಯಾ ವಿಶೇಷ ಮಕ್ಕಳ ಶಾಲೆಗೆ
News

ಕರ್ತವ್ಯದಲ್ಲೇ ವಿದ್ಯುತ್ ಸ್ಪರ್ಶ – ಬಂಟ್ವಾಳದ ಕೆದಿಲದಲ್ಲಿ ಲೈನ್‌ಮ್ಯಾನ್ ರವಿ ದುರ್ಮರಣ

ಬಂಟ್ವಾಳ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಲೈನ್‌ಮ್ಯಾನ್‌ವೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕೆದಿಲದಲ್ಲಿ ನಡೆದಿದೆ. ಮೃತರನ್ನು ಕೆದಿಲ ಪಾಟ್ರಕೋಡಿ–ಮಿತ್ತೂರು ಗಡಿಯಾರ ನಿವಾಸಿ

You cannot copy content of this page