MRPL ಸ್ಫೋಟದಲ್ಲಿ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವಾ ಸಾವು – 17 ದಿನಗಳ ಚಿಕಿತ್ಸೆ ವಿಫಲ
MRPLನಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವಾ ಅವರು 17 ದಿನಗಳ ಚಿಕಿತ್ಸೆಯ ಬಳಿಕ ಇಂದು ಅಕ್ಟೋಬರ್ 17ರಂದು ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ.

ಸುರತ್ಕಲ್ ಸಮೀಪದ ಇಡ್ಯ ಗ್ರಾಮದ ಕಾನ ನಿವಾಸಿಯಾಗಿದ್ದ ರಾಜೇಶ್ ಅವರು ಹಲವು ವರ್ಷಗಳಿಂದ MRPL ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸ್ಫೋಟದಲ್ಲಿ ತೀವ್ರ ಸುಟ್ಟ ಗಾಯಗಳಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ವೈದ್ಯರ ಸತತ ಪ್ರಯತ್ನಗಳ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.



ಸೆಪ್ಟೆಂಬರ್ 30ರಂದು ಎಂಆರ್ಪಿಎಲ್ನ ಮೂರನೇ ಹಂತದಲ್ಲಿರುವ ಕೋಕರ್ ಹೈಡ್ರೋ ಟ್ರೀಟಿಂಗ್ ಯುನಿಟ್ (CHTU) ಘಟಕದಲ್ಲಿ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ರಾಜೇಶ್ ಅವರೂ ಮೃತಪಟ್ಟಿದ್ದಾರೆ.


ಬ್ಯಾಪ್ಟಿಸ್ಟ್ ಡಿಸಿಲ್ವಾ ಅವರ ಐವರು ಮಕ್ಕಳಲ್ಲಿ ಒಬ್ಬರಾಗಿದ್ದ ರಾಜೇಶ್ ಅವಿವಾಹಿತರಾಗಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಿ, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



