ಸೂರಿಕುಮೇರು ಜಂಕ್ಷನ್‌ನಲ್ಲಿ ಪಿಕಪ್ ಡಿಕ್ಕಿ – ದಿವ್ಯಾಂಗ ಕೂಲಿ ಕಾರ್ಮಿಕ ದಾರುಣ ಸಾವು
ವಿಟ್ಲ: ರಸ್ತೆ ದಾಟುತ್ತಿದ್ದ ದಿವ್ಯಾಂಗ ಕೂಲಿ ಕಾರ್ಮಿಕರೊಬ್ಬರಿಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ದಾರುಣ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ನಡೆದಿದೆ.

ಮೃತರನ್ನು ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಗಾಣದಪಾಲು ನಿವಾಸಿ 38 ವರ್ಷ ಪ್ರಾಯದ ಪುರುಷೋತ್ತಮ ಪೂಜಾರಿ ಎಂದು ಗುರುತಿಸಲಾಗಿದೆ. ಅವರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಪುರುಷೋತ್ತಮ ಪೂಜಾರಿಯವರು ಸೂರಿಕುಮೇರು ಜಂಕ್ಷನ್‌ನಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಅವರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಪಘಾತದ ಬಳಿಕ ಪಿಕಪ್ ವಾಹನ ಸ್ಥಳದಿಂದ ತೆರಳಿತ್ತು ಎನ್ನಲಾಗಿದ್ದು, ಮಾಹಿತಿ ತಿಳಿದ ವಿಟ್ಲ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ನಡೆಸಿ ಪರಾರಿಯಾಗಿದ್ದ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ.




