ಕಸ್ತೂರಿ ರಂಗನ್ ವರದಿ ಪರಿಶೀಲನಾ ಹೈಪವರ್ ಸಮಿತಿಗೆ ಮಂಗಳೂರಿನ ಉದ್ಯಮಿ ನಾಸಿರ್ ಲಕ್ಕಿಸ್ಟಾರ್ ನೇಮಕ
ಮಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯನ್ನು ಪರಿಶೀಲಿಸಿ, ರಾಜ್ಯದ ಹಿತದೃಷ್ಟಿಯಿಂದ ಸೂಕ್ತ ಬದಲಾವಣೆ ಹಾಗೂ ಶಿಫಾರಸುಗಳನ್ನು ಸಲ್ಲಿಸಲು ರಾಜ್ಯ ಸರ್ಕಾರ ರಚಿಸಿರುವ ಮಹತ್ವದ ಹೈಪವರ್ ಸಮಿತಿಗೆ ಮಂಗಳೂರಿನ ಉದ್ಯಮಿ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅವರು ಸದಸ್ಯರಾಗಿ ನೇಮಕಗೊಂಡಿದ್ದಾರೆ.

ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಜೋನ್ ಮೈಕಲ್ ಡಿಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಒಂಬತ್ತು ಸದಸ್ಯರ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೈಗಾರಿಕೆ ಮತ್ತು ಉದ್ಯಮ ಕ್ಷೇತ್ರವನ್ನು ಪ್ರತಿನಿಧಿಸುವ ಸದಸ್ಯರಾಗಿ ನಾಸಿರ್ ಲಕ್ಕಿಸ್ಟಾರ್ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ.
ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ರಾಜ್ಯದ ವಿವಿಧ ಪ್ರದೇಶಗಳು, ಜನಜೀವನ, ಪರಿಸರ ಹಾಗೂ ಕೈಗಾರಿಕಾ ಚಟುವಟಿಕೆಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನು ಸಮಗ್ರವಾಗಿ ಅಧ್ಯಯನ ಮಾಡುವುದು ಈ ಸಮಿತಿಯ ಪ್ರಮುಖ ಕಾರ್ಯವಾಗಿದೆ. ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ವರದಿಯ ವಿವಿಧ ಅಂಶಗಳನ್ನು ಪರಿಶೀಲಿಸಿ, ರಾಜ್ಯದ ವಾಸ್ತವಿಕ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಬದಲಾವಣೆಗಳು ಮತ್ತು ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ.

ಮೂಲತಃ ಮಂಗಳೂರು ನಗರದ ಬೈಕಂಪಾಡಿಯವರಾದ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅವರು ಕಳೆದ ಮೂರು ದಶಕಗಳಿಂದ ಉದ್ಯಮ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿರುವ ಅವರು, ವಿವಿಧ ಸಾಮಾಜಿಕ ಹಾಗೂ ಧಾರ್ಮಿಕ ಸಂಘಟನೆಗಳ ಮೂಲಕವೂ ತಮ್ಮನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.


ಉದ್ಯಮ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ದೀರ್ಘಕಾಲದ ಅನುಭವ ಹೊಂದಿರುವ ನಾಸಿರ್ ಲಕ್ಕಿಸ್ಟಾರ್ ಅವರಿಗೆ ರಾಜ್ಯಮಟ್ಟದ ಮಹತ್ವದ ಸಮಿತಿಯಲ್ಲಿ ಸ್ಥಾನ ದೊರೆತಿರುವುದು ಮಂಗಳೂರಿಗೆ ಹೆಮ್ಮೆಯ ಸಂಗತಿಯಾಗಿದೆ. ಸ್ಥಳೀಯ ನೆಲದ ಅನುಭವ ಹಾಗೂ ಉದ್ಯಮ ಕ್ಷೇತ್ರದ ದೃಷ್ಟಿಕೋನವನ್ನು ಸಮಿತಿಯ ಅಧ್ಯಯನ ಮತ್ತು ಶಿಫಾರಸುಗಳಲ್ಲಿ ಪ್ರತಿನಿಧಿಸಲು ಅವರಿಗೆ ಉತ್ತಮ ಅವಕಾಶ ಒದಗಿದೆ.



